- ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ
ಬೆಂಗಳೂರು: ರಾಜ್ಯ ಸರ್ಕಾರವು 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸೌಲಭ್ಯ ಒದಗಿಸಲು ಮುಂದಾಗಿದೆ. “ಅನ್ನ ಸುವಿಧಾ” ಯೋಜನೆಯಡಿ ಇದೀಗ ಈ ವಯೋಮಾನದ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ನೇರವಾಗಿ ಪಡಿತರ ವಿತರಣೆ ಮಾಡುವ ಯೋಜನೆ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆಯನ್ನು ಈಗಾಗಲೇ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಜಾರಿಗೊಳಿಸಲಾಗಿದ್ದು, ಈಗ ಅದನ್ನು ವಿಸ್ತರಿಸಿ 75 ವರ್ಷ ಮೇಲ್ಪಟ್ಟವರಿಗೂ ಈ ಸೇವೆ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
2023ರ ಮಾರ್ಚ್ ಅಂತ್ಯದವರೆಗೆ ಸಲ್ಲಿಸಲಾದ ಅರ್ಜಿಗಳನ್ನು ವಿಲೇವಾರಿ ಮಾಡಿ, ಅರ್ಹ ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ಈ ಕಾರ್ಯಕ್ಕೆ ಸರ್ಕಾರದ ಅನುಮತಿ ಪಡೆದ ಬಳಿಕ ಕ್ರಮಗಳನ್ನು ಜರುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸಧ್ಯದಲ್ಲಿಯೇ ಹೊಸ ಅರ್ಜಿಗಳನ್ನು ಆಹ್ವಾನಿಸುವುದು ಇಲ್ಲ. ಆದರೆ ಈಗಾಗಲೇ ಗುರುತಿಸಲಾದ 2 ಲಕ್ಷ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸುವ ವ್ಯವಸ್ಥೆ ಆರಂಭಿಸಲಾಗುವುದು. ಜೊತೆಗೆ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಸಂಖ್ಯೆಯನ್ನು 3.30 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಎಲ್ಲರಿಗೆ “ಅನ್ನ ಸುವಿಧಾ” ಯೋಜನೆಯ ಲಾಭ ಸಿಗಲಿದೆ ಎಂದು ಸಚಿವರು ತಿಳಿಸಿದ್ದಾರೆ.ಇದನ್ನು ಓದಿ –ಇಂದು ಹಲವು ಜಿಲ್ಲೆಗಳಲ್ಲಿ ಮಳೆ, ಮೇ 9ರಿಂದ ಭಾರಿ ಮಳೆಯ ನಿರೀಕ್ಷೆ
ಈ ಯೋಜನೆಯಿಂದ ರಾಜ್ಯದ ಸಾವಿರಾರು ಹಿರಿಯ ನಾಗರಿಕರಿಗೆ ಆಹಾರ ಧಾನ್ಯಗಳ ಲಭ್ಯತೆ ಸುಲಭವಾಗಲಿದೆ.