ಬೆಂಗಳೂರು : ಇಂದು ಬೆಳಗ್ಗೆಯೇ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆಯ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಯುತ್ತಿದೆ.
ಬೆಂಗಳೂರುನಲ್ಲಿ ಅಧಿಕಾರಿಗಳಾದ ಟಿ.ವಿ. ಮುರಳಿ, ಹೆಚ್.ಆರ್. ನಟರಾಜ್ ಹಾಗೂ ಗ್ರಾಮಾಂತರದ ಅನಂತ್ ಕುಮಾರ್ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ. ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ತುಮಕೂರು ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾದ ರಾಜಶೇಖರ್ ಅವರ ಮನೆ ಮೇಲೆ ದಾಳಿ ನಡೆದಿದೆ. ಅಲ್ಲದೆ, ಸಪ್ತಗಿರಿ ಬಡಾವಣೆ ಮತ್ತು ಎಸ್‌ಎಸ್ ಪುರಂನಲ್ಲಿರುವ ಅವರ ಸಹೋದರನ ಮನೆಗಳಲ್ಲಿಯೂ ತನಿಖೆ ನಡೆಯುತ್ತಿದೆ. ಒಟ್ಟು 10 ಅಧಿಕಾರಿಗಳು ಏಕಕಾಲದಲ್ಲಿ ದಾಳಿಗೆ ಮುಂದಾಗಿದ್ದು, ರಾಜಶೇಖರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಆರೋಪ ಉಂಟಾಗಿದೆ.ಇದನ್ನು ಓದಿ –ಚಂಡಮಾರುತದ ಅಲೆ: ಮೇ 26ರ ವರೆಗೆ ಭಾರೀ ಮಳೆಯ ಮುನ್ಸೂಚನೆ
ಕಲಬುರಗಿ ಜಿಲ್ಲೆಯ ಶಹಾಪೂರ ತಾಲ್ಲೂಕಿನ ತಹಸೀಲ್ದಾರ್ ಉಮಾಕಾಂತ ಹಳ್ಳೆ ಅವರ ಮನೆ ಹಾಗೂ ಕಚೇರಿಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಅವರ ನಿವಾಸ ಹಾಗೂ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.