ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ನಿರೀಕ್ಷೆಯಿದೆ.
ಬೆಂಗಳೂರು ನಗರಕ್ಕೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದಲ್ಲದೇ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ತೀವ್ರ ಮಳೆಯ ಸಾಧ್ಯತೆ ಇದ್ದು ಜನತೆ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.
ಇನ್ನೊಂದು ಕಡೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಹವಾಮಾನ ಇಲಾಖೆಯ ಎಚ್ಚರಿಕೆಯಿಂದ ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಲು ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.