ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ದಾಖಲಾತಿ ಸಹಿತವಾಗಿ ಸಾರ್ವಜನಿಕವಾಗಿ ಬಿಚ್ಚಿಟ್ಟಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ನಾಳೆ (ಆಗಸ್ಟ್ 17) ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದೆ.
ಮುಖ್ಯ ಚುನಾವಣಾ ಆಯುಕ್ತರು ಸ್ವತಃ ಸುದ್ದಿಗೋಷ್ಠಿಯನ್ನು ನಡೆಸಲಿದ್ದು, ರಾಹುಲ್ ಗಾಂಧಿ ಹೊರ ಹಾಕಿದ ಆರೋಪಗಳಿಗೆ ದಾಖಲೆ ಆಧಾರಿತ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಮಹಾದೇವಪುರ ಕ್ಷೇತ್ರದಲ್ಲಿ ಮಾತ್ರವಲ್ಲ, ದೇಶದ ಹಲವು ಭಾಗಗಳಲ್ಲಿ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಮನೆ ಸಂಖ್ಯೆ ಇಲ್ಲದ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರಿವೆ, ಜೊತೆಗೆ ಒಬ್ಬರ ಹೆಸರು ಎರಡು ಕಡೆ ಸೇರಿರುವಂತಹ ದಾಖಲೆಗಳನ್ನೂ ಅವರು ಪ್ರದರ್ಶಿಸಿದ್ದರು.
ಈ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ನಾಳೆಯ ಸುದ್ದಿಗೋಷ್ಠಿಯ ಮೂಲಕ ಎಲ್ಲಾ ಆರೋಪಗಳಿಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಲಿದೆ.