- ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಆಗಸ್ಟ್ 28ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮರುಕಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಸ್ತುತ ಮಳೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕುಂದಿದರೂ, ಆ.28ರಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮತ್ತೆ ಚುರುಕುಗೊಳ್ಳಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ವ್ಯಕ್ತವಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆ ಬಿರುಸಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಪ್ರಕಟಿಸಿದೆ. ಇದೇ ವೇಳೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆ ಇದೆ.
ಆ.25ರಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದೇ ವೇಳೆ,
- ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆ.28ರಿಂದ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.
- ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಆ.29ರಂದು ಮಳೆ ಬಿರುಸಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- ಯಾದಗಿರಿ ಜಿಲ್ಲೆಯಲ್ಲಿ ಆ.28ರಂದು ಮಳೆ ತೀವ್ರವಾಗುವ ಹಿನ್ನೆಲೆಯಲ್ಲಿ ಅಲರ್ಟ್ ನೀಡಲಾಗಿದೆ.
ಇದನ್ನು ಓದಿ –ರಂಗಭೂಮಿ ಹಾಗೂ ಚಲನಚಿತ್ರ ನಟ ದಿನೇಶ್ ಮಂಗಳೂರು ನಿಧನ
ರಾಜ್ಯಾದ್ಯಂತ ಮಳೆಯ ತೀವ್ರತೆ ಮುಂದಿನ ದಿನಗಳಲ್ಲಿ ಹೆಚ್ಚುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.