ನವದೆಹಲಿ, ಸೆ. 9 – ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಹಾಗೂ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಜಗದೀಪ್ ಧನ್ಕರ್ ಅವರು ಆರೋಗ್ಯ ಕಾರಣಗಳಿಂದ ಕಳೆದ ಜುಲೈ 21ರಂದು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರಿಂದ ಸ್ಥಾನ ತೆರವಾಗಿತ್ತು. ಆ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್ ಸ್ಪಷ್ಟ ಬಹುಮತ ಪಡೆದು ಜಯ ಸಾಧಿಸಿದರು.
ಈ ಚುನಾವಣೆಯಲ್ಲಿ ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಸೋಲನ್ನು ಅನುಭವಿಸಿದರು.
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಬಿಆರ್‌ಎಸ್, ಬಿಜೆಡಿ ಹಾಗೂ ಶಿರೋಮಣಿ ಅಕಾಲಿ ದಳ ಸೇರಿದಂತೆ ಹಲವಾರು ಪಕ್ಷಗಳು ಮತದಾನದಿಂದ ದೂರ ಉಳಿದವು.
ಉಪರಾಷ್ಟ್ರಪತಿ ಚುನಾವಣೆಗೆ ಇಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಮತದಾನ ನಡೆದು, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ನಾಯಕರು ಮತದಾನದಲ್ಲಿ ಪಾಲ್ಗೊಂಡರು.ಇದನ್ನು ಓದಿ –ನಂಜನಗೂಡು–ನಿಲಂಬೂರು ರೈಲು ಯೋಜನೆಗೆ ಹೊಸ ಚೈತನ್ಯ
ಸಂಜೆ 6 ಗಂಟೆಯಿಂದ ಆರಂಭವಾದ ಮತ ಎಣಿಕೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲುವು ಸಾಧಿಸಿದ್ದು, ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು.