ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ (ಸೆಪ್ಟೆಂಬರ್ 29) ಕರ್ನಾಟಕದಲ್ಲಿ ಭಾರಿ ಮಳೆ, ಗಾಳಿ ಎಚ್ಚರಿಕೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಮಾಹಿತಿ ಪ್ರಕಾರ, ರಾಜ್ಯದಾದ್ಯಂತ ಮುಂದಿನ 6 ದಿನಗಳ ಕಾಲ ಮಳೆ ಮುಂದುವರಿಯಲಿದೆ.
ಕರಾವಳಿ:
ಕರಾವಳಿ ಪ್ರದೇಶದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತ ಸಂಭವನೀಯವಾಗಿದೆ. ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50–60 ಕಿ.ಮೀ ವೇಗದ ಗಾಳಿ ಎಚ್ಚರಿಕೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 4ರವರೆಗೆ ಈ ಭಾಗದಲ್ಲಿ ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡಕವಿತ ಹವಾಮಾನ ಮುಂದುವರಿಯಲಿದೆ.
ಉತ್ತರ ಒಳನಾಡು:
ಸೆಪ್ಟೆಂಬರ್ 29 ಮತ್ತು 30ರಂದು ಉತ್ತರ ಕರ್ನಾಟಕದ ಒಳನಾಡುಗಳಲ್ಲಿ ಗುಡುಗು ಸಹಿತ ಮಧ್ಯಮದಿಂದ ಭಾರೀ ಮಳೆಯ ಸಾಧ್ಯತೆ ಇದೆ. ಬೆಳಗಾವಿ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ 12–20 ಮಿಮೀ ಮಳೆಯಾಗಬಹುದು. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡು:
ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಇಂದು 3–6 ಮಿಮೀ ಮಳೆಯ ಸಾಧ್ಯತೆ ಇದೆ. ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಚದುರಿದ ಮಳೆ ಮುಂದುವರಿಯಲಿದೆ.
ಇತರ ಜಿಲ್ಲೆಗಳು:
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಇದನ್ನು ಓದಿ –ಬೆಂಗಳೂರು ಹಿಟ್ & ರನ್ ಅಪಘಾತದಲ್ಲಿ ವಿದ್ಯಾರ್ಥಿನಿ ಬಲಿ
ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕಾಗಿದೆ.








