ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ಕರಾವಳಿ ಭಾಗಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಮೀನುಗಾರರು ಮುಂದಿನ ಕೆಲವು ದಿನಗಳವರೆಗೆ ಸಮುದ್ರಕ್ಕೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಹ ಸಂಜೆ ಸಮಯದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ನಗರದಲ್ಲಿ ತೇವಾಂಶ ಹೆಚ್ಚಾಗಿದ್ದು, ಅಂತರಾಲಗಳಲ್ಲಿ ಬಿರುಸಿನ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗಡಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಕಲಬುರಗಿ, ಬಾಗಲಕೋಟೆ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆಯು ಮುಂದುವರಿಯುವ ಸಾಧ್ಯತೆ ಇದೆ.
ಮಳೆಯ ಅಲೆ ದಕ್ಷಿಣ ಒಳನಾಡಿನತ್ತವೂ ವಿಸ್ತರಿಸಲಿದೆ. ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಜೊತೆಗೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಇದನ್ನು ಓದಿ –ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ರದ್ದು
ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿನಂತಿಸಲಾಗಿದೆ.








