ಹಾಸನ: ಹಾಸನಾಂಬ ದೇವಿಯ ದರ್ಶನ ಪಡೆದು ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ದುರ್ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಅರಣ್ಯ ಪ್ರದೇಶದ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಪೊಲೀಸ್ ವರದಿಯ ಪ್ರಕಾರ, ಬೆಂಗಳೂರಿನ ನಿವಾಸಿಗಳಾದ ಅನುಶ್ರೀ (19), ಛಾಯಾ (20) ಹಾಗೂ ಬಸವರಾಜು ಯಮಹಾ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಹಾಸನಾಂಬ ದೇವಿಯ ದರ್ಶನ ಮುಗಿಸಿ ತವರು ಕಡೆಗೆ ತೆರಳುತ್ತಿದ್ದ ವೇಳೆ ಚನ್ನರಾಯಪಟ್ಟಣ ದಿಕ್ಕಿನಿಂದ ವೇಗವಾಗಿ ಬಂದ ಇನ್ನೋವಾ ಕಾರು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು, ನಂತರ ಅವರ ಬೈಕ್‌ಗೆ ಗುದ್ದಿದೆ.
ಅಪಘಾತದ ಪರಿಣಾಮ ಬೈಕ್‌ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಮತ್ತೊಬ್ಬ ಯುವತಿ ಛಾಯಾ ತೀವ್ರವಾಗಿ ಗಾಯಗೊಂಡಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೇ ವೇಳೆ, ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್ ಅವರಿಗೂ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇದನ್ನು ಓದಿ –ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.








