ಚಾಮರಾಜನಗರ, ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ ಸಾವನ್ನಪ್ಪಿದ್ದು, 17 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ತಾಲೂಕಿನ ಇರಸವಾಡಿ ಗ್ರಾಮದ ಮಂಜು (32) ಮೃತಪಟ್ಟ ಕೆಎಸ್‌ಆರ್‌ಟಿಸಿ ಬಸ್ ಚಾಲಕ.
ಬೆಂಡರವಾಡಿ ಗ್ರಾಮದ ಬಳಿ ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದ್ದು, ಮೈಸೂರಿನಿಂದ ಚಾಮರಾಜನಗರಕ್ಕೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಬದನಗುಪ್ಪೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಲಾರಿ ಬೆಂಡರವಾಡಿ ಗ್ರಾಮದ ತಿರುವಿನಲ್ಲಿ ಮುಖಮುಖಿ ಡಿಕ್ಕಿಯಾಗಿದೆ. ಬಸ್ ಹಾಗೂ ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
ತಮಿಳುನಾಡಿನ ಗೋವಿಂದ ಸ್ವಾಮಿ ಲಾರಿ ಚಾಲಕ. ಈತನ ಎರಡು ಕಾಲಿಗೆ ಗಂಭೀರವಾಗಿ ಪೆಟ್ಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ವಿಷಯ ತಿಳಿದ ಕೂಡಲೇ ಚಾಮರಾಜನಗರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ತಕ್ಷಣವೇ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿದರು.ಇದನ್ನು ಓದಿ – ಇವಿಎಂ ಬಳಕೆ ಕುರಿತು ಯಾವುದೇ ಸಮೀಕ್ಷೆ ನಡೆದಿಲ್ಲ
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಂತರ ಪೊಲೀಸರು ಬಸ್ ಹಾಗೂ ಲಾರಿಯನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಈ ಸಂಬಂಧ ಚಾಮರಾಜನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








