ಹಾವೇರಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕಾರಣದಿಂದ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಒಟ್ಟು ₹1.12 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು. ಪ್ರತಿ ವರ್ಷ ಸರಾಸರಿ ₹52 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಪ್ರಯತ್ನಗಳು ನಡೆಯಬಾರದು ಎಂದು ಅವರು ಹೇಳಿದರು. ಇಷ್ಟು ದೊಡ್ಡ ಮೊತ್ತವನ್ನು ವೆಚ್ಚ ಮಾಡಿದರೂ ರಾಜ್ಯದ ಆರ್ಥಿಕ ಸ್ಥಿತಿ ಸ್ಥಿರವಾಗಿದ್ದು, ಸರ್ಕಾರ ದಿವಾಳಿ ಆಗಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದರು.ಇದನ್ನು ಓದಿ –ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ
ನಮ್ಮ ಸರ್ಕಾರ ಯಾವುದೇ ತಾರತಮ್ಯ ಮಾಡದೇ ಎಲ್ಲರನ್ನು ಸಮಾನವಾಗಿ ಕಾಣುತ್ತದೆ ಎಂದು ತಿಳಿಸಿದ ಮುಖ್ಯಮಂತ್ರಿ, ಎಲ್ಲ ಧರ್ಮ ಹಾಗೂ ಜಾತಿಯ ಬಡವರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಲಭ್ಯಗಳು ದೊರಕಬೇಕು. ಆಗ ಮಾತ್ರ ಜಾತ್ಯತೀತ ಹಾಗೂ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.








