- ಆರೋಪಿಗಳಿಗಾಗಿ 7 ವಿಶೇಷ ಪೊಲೀಸ್ ತಂಡಗಳ ಶೋಧ
ಆನೇಕಲ್, ಮಾರ್ಚ್ 09: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಅವರನ್ನು ಅಪಹರಿಸಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.
ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಅಲಿಯಾಸ್ ಗೋಪಿ ಎಂಬವರು ರಿಯಲ್ ಎಸ್ಟೇಟ್ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಮಾರ್ಚ್ 8ರಂದು ಸಂಜೆ ಸುಮಾರು 7.30ರ ವೇಳೆಗೆ ಕರ್ಪೂರು ಗೇಟ್ ಬಳಿ ಗೋಪಾಲ್ ಹಾಗೂ ಸತೀಶ್ ಪ್ರಯಾಣಿಸುತ್ತಿದ್ದ ಕಾರಿಗೆ ದುಷ್ಕರ್ಮಿಗಳು ಮತ್ತೊಂದು ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ. ನಂತರ ಸ್ಪ್ರೇ ಬಳಸಿ ದಾಳಿ ನಡೆಸಿ ಗೋಪಾಲ್ ಅವರನ್ನು ಅಪಹರಿಸಿಕೊಂಡು ಹೋಗಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಕುಟುಂಬಸ್ಥರ ಶಂಕೆಯ ಆಧಾರದ ಮೇಲೆ ಜಿಗಣಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೋಹನ್ ಬಾಬು, ಹರೀಶ್ ಹಾಗೂ ಕಿರಣ್ ಎಂಬವರನ್ನು ಗೋಪಾಲ್ ಅವರ ಪತ್ನಿಯ ದೂರಿನ ಮೇರೆಗೆ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಅಪಹರಣಗೊಂಡ ಗೋಪಾಲ್ ಅವರ ಪತ್ತೆಗಾಗಿ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 7 ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳಲ್ಲಿ 9 ಇನ್ಸ್‌ಪೆಕ್ಟರ್‌ಗಳು ಭಾಗವಹಿಸಿದ್ದು, ವಿವಿಧ ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಅವರು ಆನೇಕಲ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚುವರಿ ಎಸ್‌ಪಿ ವೆಂಕಟೇಶ್ ಪ್ರಸನ್ನ ಅವರು ಸ್ಥಳದಲ್ಲೇ ತಂಗಿ ತನಿಖೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅಪಹರಣಗೊಂಡ ಗೋಪಾಲ್ ಅವರನ್ನು ಶೀಘ್ರ ಪತ್ತೆಹಚ್ಚಲು ಪೊಲೀಸರು ಎಲ್ಲ ದಿಕ್ಕುಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.








