ತುಮಕೂರು: ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಪೊಲೀಸರ ಹಲ್ಲೆಯಿಂದಲೇ ಸಾವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮೃತರನ್ನು ಕಾಂತರಾಜು (45) ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಟ ಆಡುತ್ತಿದ್ದ ಆರು ಜನರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಕಾಂತರಾಜು ಠಾಣೆಯಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಗೆ ಆಕ್ರೋಶಗೊಂಡ ಗ್ರಾಮಸ್ಥರು ಹುಳಿಯಾರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಬಂದ ಎಸ್‌ಪಿ ಅಶೋಕ್ ಗ್ರಾಮಸ್ಥರಿಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಗಿದೆ.
ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.








