ಬೆಂಗಳೂರು: ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನವೇ ಬೆಂಗಳೂರಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ. ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಯಿಸಿ ಪರೀಕ್ಷೆಗೆ ಅವಕಾಶ ನೀಡಿದರು ಎಂಬ ಗಂಭೀರ ಆರೋಪ ವ್ಯಕ್ತವಾಗಿದೆ.
ಗುರುವಾರ ನಡೆದ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ತಡೆದು, ಜನಿವಾರ ತೆಗೆಯುವಂತೆ ಸೂಚಿಸಲಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಸಿಬ್ಬಂದಿ ಎಚ್ಚರಿಕೆ ನೀಡಿದರೆಂದು ಆರೋಪಿಸಲಾಗಿದೆ.
ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಅನಿವಾರ್ಯವಾಗಿ ಜನಿವಾರ ತೆಗೆಯಿಸಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಹಾಗೂ ಸಿಇಟಿ ಸೆಲ್ ಅಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರಿಗೆ ಮನವೊಲಿಸಲು ಅಧಿಕಾರಿಗಳು ಪ್ರಯತ್ನಿಸಿದ್ದು, ದೂರು ನೀಡಬೇಡಿ ಎಂದು ಪತ್ರ ಬರೆಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಈ ಘಟನೆಗೆ ಪೋಷಕರು ಹಾಗೂ ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಧಾರ್ಮಿಕ ಹಕ್ಕಿಗೆ ಧಕ್ಕೆ ತರುವ ಇಂತಹ ಕ್ರಮಗಳು ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆಇದನ್ನು ಓದಿ -.“ಅಂಕಗಳಿಗಿಂತ ಅಚೀವ್ಮೆಂಟ್ ದೊಡ್ಡದು”
ಕಳೆದ ವರ್ಷವೂ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯಿಸಿದ ಘಟನೆಗಳು ವಿವಾದಕ್ಕೆ ಕಾರಣವಾಗಿದ್ದವು. ಶಿವಮೊಗ್ಗ ಮತ್ತು ಬೀದರ್‌ನ ಪರೀಕ್ಷಾ ಕೇಂದ್ರಗಳಲ್ಲಿ ಇದೇ ರೀತಿಯ ಪ್ರಕರಣಗಳು ನಡೆದಿದ್ದವು. ಈ ಸಂಬಂಧ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿತ್ತು.








