ಕೋಲಾರ: ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಾಸ್ತವಾಂಶವನ್ನು ಜನರ ಮುಂದಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.
ಕೋಲಾರದಲ್ಲಿ ಮಾತನಾಡಿದ ಅವರು, ಸಚಿವರ ಆರೋಗ್ಯದ ಬಗ್ಗೆ ಸರ್ಕಾರ ಸ್ಪಷ್ಟ ಮಾಹಿತಿ ನೀಡಿದ್ದರೆ ನಾನು ಪ್ರಶ್ನೆ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಹೇಳಿದರು.
ಸುಧಾಕರ್ ಅವರ ಆರೋಗ್ಯ ವಿಚಾರವನ್ನು ಮುಚ್ಚಿಟ್ಟಿದ್ದಾರೆ ಎಂಬ ತಮ್ಮ ಹೇಳಿಕೆಗೆ ಸಮಜಾಯಿಷಿ ನೀಡಿದ ಅವರು, ಸರ್ಕಾರವೇ ಈ ಬಗ್ಗೆ ಸ್ಪಷ್ಟನೆ ನೀಡಬೇಕಿತ್ತು ಎಂದು ತಿಳಿಸಿದರು.
ಮೇಕೆದಾಟು ಯೋಜನೆ ವಿಷಯದಲ್ಲಿ ಕಾಂಗ್ರೆಸ್ ಬಾಲಿಶವಾಗಿ ಮಾತನಾಡುತ್ತಿದೆ. ಸುಪ್ರೀಂಕೋರ್ಟ್ ಕೇಂದ್ರದ ಪರವಾಗಿದೆ ಎಂದು ಹೇಳುವ ಕಾಂಗ್ರೆಸ್, ತಮಿಳುನಾಡಿನಲ್ಲಿ ತನ್ನ ಮಿತ್ರಪಕ್ಷದ ಪರ ಪ್ರಚಾರ ನಡೆಸುತ್ತಿದೆ. ಚುನಾವಣಾ ಪ್ರಚಾರದಲ್ಲಿ ಈ ವಿಷಯವನ್ನು ಯಾಕೆ ಪ್ರಸ್ತಾಪಿಸುತ್ತಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ನೀರು ಪೂರೈಕೆಯಲ್ಲಿ ಸಂಪೂರ್ಣ ವಿಫಲವಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲೆಗೆ ₹45 ಕೋಟಿ ಬಿಡುಗಡೆ ಮಾಡಿದ್ದೇವೆ ಎಂದು ಹೇಳಲಾಗುತ್ತಿದೆ. ಆದರೆ ಆ ಹಣ ಯಾರ ಖಾತೆಗೆ ಹೋಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ ಎಂದು ದೂರಿದರು.
ಒಳ ಮೀಸಲಾತಿ ವಿಷಯವನ್ನು ನಾನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ. ದಲಿತರ ಹೆಸರಿನಲ್ಲಿ ರಾಜಕೀಯ ಮಾಡುವುದಿಲ್ಲ. ಆದರೆ ಪ್ರಾಮಾಣಿಕವಾಗಿ ಪ್ರತೀ ಕುಟುಂಬಕ್ಕೂ ಮೀಸಲಾತಿಯ ಲಾಭ ತಲುಪಬೇಕು ಎಂದು ಹೇಳಿದರು.








