ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಟು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ.
ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳನ್ನು ಬಲಪಡಿಸುವ ಉದ್ದೇಶದಿಂದ ಈ ಸಮಗ್ರ ಯೋಜನೆ ರೂಪಿಸಲಾಗಿದೆ.
ಈ ಯೋಜನೆಯಡಿ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆಯನ್ನು ತ್ವರಿತ ನೇಮಕಾತಿ ಮೂಲಕ ನಿವಾರಿಸಲಾಗುತ್ತದೆ. ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯ ಒದಗಿಸಲಾಗುತ್ತದೆ.
ವಿದ್ಯಾರ್ಥಿಗಳು ಮತ್ತು ಪೋಷಕರ ಇಚ್ಛೆಗೆ ತಕ್ಕಂತೆ ಭಾಷಾ ಮಾಧ್ಯಮ ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ವಾರ್ಡ್‌ಗಳಿಂದ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಪ್ರತಿ ಶಾಲೆಯಲ್ಲೂ ಡಿಜಿಟಲ್ ಕಲಿಕೆಗೆ ಉತ್ತೇಜನ ನೀಡಿ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲು ಆದ್ಯತೆ ನೀಡಲಾಗಿದೆ. ಕಲೆ ಹಾಗೂ ಕ್ರೀಡಾ ಚಟುವಟಿಕೆಗಳಿಗೂ ಸಮಾನ ಮಹತ್ವ ನೀಡಲಾಗುತ್ತದೆ.
ಶೈಕ್ಷಣಿಕ ಗುಣಮಟ್ಟವನ್ನು ನಿರಂತರವಾಗಿ ಪರಿಶೀಲಿಸಲು ಪ್ರತ್ಯೇಕ ಮೇಲ್ವಿಚಾರಣಾ ಸಮಿತಿಗಳನ್ನು ರಚಿಸಲಾಗುತ್ತದೆ. ಜೊತೆಗೆ, ಭವಿಷ್ಯದ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಶಾಲಾ ಹಂತದಲ್ಲೇ ಕೌಶಲಾಧಾರಿತ ತರಬೇತಿ ನೀಡಲಾಗುತ್ತದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡ ಮುಖ್ಯಮಂತ್ರಿಯವರು, ಇತ್ತೀಚಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳ ಉತ್ತಮ ಫಲಿತಾಂಶವನ್ನು ಉಲ್ಲೇಖಿಸಿದ್ದಾರೆ.
ಎಸ್‌ಎಸ್‌ಎಲ್‌ಸಿಯಲ್ಲಿ 94.1 ಶೇಕಡಾ ಹಾಗೂ ಪಿಯುನಲ್ಲಿ 86.48 ಶೇಕಡಾ ಫಲಿತಾಂಶ ದಾಖಲಾಗಿದ್ದು, ವಿಶೇಷವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ ಗಮನಾರ್ಹವಾಗಿದೆ ಎಂದು ತಿಳಿಸಿದ್ದಾರೆ.
2026–27ನೇ ಶೈಕ್ಷಣಿಕ ವರ್ಷದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗುವುದು. ಇದರಿಂದ 50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲೇ ಅತ್ಯುತ್ತಮ ಸರ್ಕಾರಿ ಶಾಲಾ ವ್ಯವಸ್ಥೆ ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ –ಒಳಮೀಸಲಾತಿ ಅನ್ವಯ ಶೀಘ್ರ 225 ವೈದ್ಯರ ನೇಮಕ: ದಿನೇಶ್ ಗುಂಡೂರಾವ್
ಪೋಷಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳಿಗೆ ಪ್ರವೇಶ ಪಡೆದು ಈ ಪರಿವರ್ತನೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿಯವರು ಕರೆ ನೀಡಿದ್ದಾರೆ.








