ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 15ರಿಂದ 18ರವರೆಗೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ಬೆಂಗಳೂರಿನಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚು. ಈ ಅವಧಿಯಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.ನೂತನ ಅಬಕಾರಿ ನೀತಿ: ಬಿಯರ್, ಪ್ರೀಮಿಯಂ ವಿಸ್ಕಿ ದರ ಇಳಿಕೆ
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಮುಂದಿನ ಮೂರು ದಿನಗಳ ಕಾಲ ಅಲ್ಲಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








