ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿಯಲ್ಲಿ ಯಾವುದೇ ಬಿಕ್ಕಟ್ಟು ಉಂಟಾಗುವುದಿಲ್ಲ ಎಂದು ಮಾಜಿ ಪ್ರಧಾನಿ H. D. ದೇವೇಗೌಡರು ವಿಶ್ವಾಸ ವ್ಯಕ್ತಪಡಿದ್ದಾರೆ.
ಬೆಂಗಳೂರುದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದು, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರೊಂದಿಗೆ ಉತ್ತಮ ಸಂಬಂಧವಿದೆ. ಯಾವುದೇ ಸಮಸ್ಯೆ ಬಂದರೂ ಚರ್ಚೆ ಮೂಲಕ ಬಗೆಹರಿಸಿಕೊಂಡು ಒಗ್ಗಟ್ಟಿನಿಂದ ಮುಂದುವರಿಯುತ್ತೇವೆ ಎಂದು ಹೇಳಿದರು.
ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ ಎನ್ನಲಾಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ರಾಜಕೀಯ ಪರಿಸ್ಥಿತಿ ಹೇಗೆ ಬದಲಾಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಅವರು ಹೇಳಿದರು.
ಪಕ್ಷದ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳು ಶಿಸ್ತಿನಿಂದ ಮತ್ತು ನಿಷ್ಠೆಯಿಂದ ಕೆಲಸ ಮಾಡಬೇಕು. ಎಚ್. ಡಿ. ಕುಮಾರಸ್ವಾಮಿ ಅವರಿಗೆ ನೀಡಲಾಗಿರುವ ಜವಾಬ್ದಾರಿಗಳನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಮರ್ಥವಾಗಿ ನಿರ್ವಹಿಸಬೇಕು ಎಂದು ದೇವೇಗೌಡ ಕರೆ ನೀಡಿದರು.
94ನೇ ವಸಂತಕ್ಕೆ ಕಾಲಿಟ್ಟಿರುವ ದೇವೇಗೌಡರು ಜೆ.ಪಿ.ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿ, ಆರೋಗ್ಯ ಅವಕಾಶ ನೀಡುವವರೆಗೆ ಜನರ ಸಮಸ್ಯೆಗಳಿಗಾಗಿ ಹೋರಾಟ ಮುಂದುವರಿಸುತ್ತೇನೆ. ವ್ಹೀಲ್‌ಚೇರ್‌ನಲ್ಲಿದ್ದರೂ ಜನರ ಸೇವೆ ನಿಲ್ಲಿಸುವುದಿಲ್ಲ ಎಂದು ಹೇಳಿದರು.ಇದನ್ನು ಓದಿ –ರಾಜ್ಯದಾದ್ಯಂತ ಆಲಿಕಲ್ಲು ಮಳೆ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯದ ಹಾಗೂ ದೇಶದ ಪ್ರಮುಖ ಸಮಸ್ಯೆಗಳ ಕುರಿತು ಮೇ 20ರಂದು ಮತ್ತೊಮ್ಮೆ ಸುದ್ದಿಗೋಷ್ಠಿ ನಡೆಸಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.








