ಬೆಂಗಳೂರು: ಮುಂಗಾರು ಪೂರ್ವ ಮಾರುತಗಳು ಹಾಗೂ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಇದನ್ನು ಓದಿ –ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ
ಗುಡುಗು-ಸಿಡಿಲಿನ ಸಂದರ್ಭ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸಲಹೆ ನೀಡಿದೆ.








