ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಆಕ್ಷೇಪಣೆ ಅರ್ಜಿ ಸಲ್ಲಿಸುವ ಸಂಬಂಧ ₹5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಸರ್ಕಾರಿ ಅಭಿಯೋಜಕಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ (ಸಿಸಿಎಚ್-54) ಸರ್ಕಾರಿ ಅಭಿಯೋಜಕಿ ಸವಿತಾ ನವೀನ್ ಪಾಟೀಲ್ ಬಂಧಿತರಾಗಿದ್ದಾರೆ. ಬನಶಂಕರಿ ನಿವಾಸಿ ಮಂಜುನಾಥ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪರ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಲು ಟೈಪಿಂಗ್ ಹಾಗೂ ಇತರೆ ವೆಚ್ಚದ ನೆಪದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಇದನ್ನು ಓದಿ –ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಡೈಮಂಡ್ ಅವಾರ್ಡ್ ಗೌರವ
ದೂರುದಾರರ ಮಾಹಿತಿಯ ಆಧಾರದಲ್ಲಿ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.








