ಬೆಂಗಳೂರು: ಕರ್ನಾಟಕ ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ, ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದೆ.
ಮಳೆಗಾಲದ ಆರಂಭದಲ್ಲೇ ವರುಣನ ಆರ್ಭಟ ಹೆಚ್ಚಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. 2018-19ರಲ್ಲಿ ಭೀಕರ ಪ್ರಕೃತಿ ವಿಕೋಪಕ್ಕೆ ಸಾಕ್ಷಿಯಾಗಿದ್ದ ಕೊಡಗು ಜಿಲ್ಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಬೆಟ್ಟಗುಡ್ಡಗಳಿಂದ ಕೂಡಿರುವ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಿದ್ಧತೆ ನಡೆಸಲಾಗಿದೆ.
ಮಡಿಕೇರಿಯ ಇಂದಿರಾನಗರ ಮತ್ತು ಚಾಮುಂಡೇಶ್ವರಿ ನಗರಗಳಲ್ಲಿ ಸುಮಾರು 1,300 ಮನೆಗಳನ್ನು ಅಪಾಯದ ಪಟ್ಟಿಗೆ ಸೇರಿಸಲಾಗಿದೆ. ಜೊತೆಗೆ ಮಂಗಳಾದೇವಿನಗರದ 200 ಹಾಗೂ ಅಜಾದ್‌ನಗರದ 350 ಮನೆಗಳನ್ನು ಗುರುತಿಸಲಾಗಿದೆ. ಕುಶಾಲನಗರ, ನೆಲ್ಲಿಹುದಿಕೇರಿ, ಕರಡಿಗೋಡು ಸೇರಿದಂತೆ ನದಿ ತೀರ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿರುವುದರಿಂದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಪೆ ಬೀಚ್‌ನಲ್ಲಿ ಮಳೆಗಾಲದ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ. ಸುಮಾರು ಒಂದು ಕಿಲೋಮೀಟರ್ ಉದ್ದದ ಪ್ರದೇಶದಲ್ಲಿ 10 ಅಡಿ ಎತ್ತರದ ತಡೆಬೇಲಿ ಅಳವಡಿಸಲಾಗಿದ್ದು, ಎಚ್ಚರಿಕೆ ಫಲಕಗಳನ್ನು ಸ್ಥಾಪಿಸಲಾಗಿದೆ.
ಸೆಪ್ಟೆಂಬರ್ 15ರವರೆಗೆ ಮಲ್ಪೆ ಬೀಚ್‌ನಲ್ಲಿ ಸಮುದ್ರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರ ಸುರಕ್ಷತೆಗಾಗಿ ಟೂರಿಸ್ಟ್ ಪೊಲೀಸ್, ಲೈಫ್ ಗಾರ್ಡ್ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡ ಗ್ರಾಮದ ಬಳಿ ಭಾರೀ ಮಳೆಯಿಂದ ಕಿರಿದಾದ ಸಂಪರ್ಕ ಸೇತುವೆ ಕುಸಿದಿದೆ. ಚಿಮ್ಮನಚೋಡ ಹಾಗೂ ನರನಾಳ ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದ್ದು, ಚಿಂಚೋಳಿಯಿಂದ ಭಾಲ್ಕಿ ತಾಲ್ಲೂಕಿನತ್ತ ಸಂಚಾರ ಸ್ಥಗಿತಗೊಂಡಿದೆ. ಇದೇ ವೇಳೆ ಬೆಡಕಪಳ್ಳಿ ಗ್ರಾಮದಲ್ಲಿ ನಿರಂತರ ಮಳೆಯಿಂದ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರು ನಗರದಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಂಗಳೂರಿನಲ್ಲಿ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದ್ದು, ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.








