ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸಬ್ಸಿಡಿ ಎಲ್ಪಿಜಿ ಸಿಲಿಂಡರ್ಗಳ ಸಂಖ್ಯೆಯನ್ನು 9ರಿಂದ 4ಕ್ಕೆ ಇಳಿಸಿದೆ.
ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ಪಿಜಿ ಲಭ್ಯತೆಯ ಕೊರತೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
2016ರಲ್ಲಿ ಉಜ್ವಲ ಯೋಜನೆ ಆರಂಭವಾದ ಸಂದರ್ಭದಲ್ಲಿ ಫಲಾನುಭವಿಗಳಿಗೆ ವರ್ಷಕ್ಕೆ 12 ಸಬ್ಸಿಡಿ ಸಿಲಿಂಡರ್ಗಳನ್ನು ನೀಡಲಾಗುತ್ತಿತ್ತು. ಬಳಿಕ ಕಳೆದ ವರ್ಷ ಈ ಸಂಖ್ಯೆಯನ್ನು 9ಕ್ಕೆ ಕಡಿತಗೊಳಿಸಲಾಗಿತ್ತು. ಇದೀಗ ಮತ್ತೊಮ್ಮೆ ಕಡಿತಗೊಳಿಸಿ ವರ್ಷಕ್ಕೆ ಕೇವಲ 4 ಸಬ್ಸಿಡಿ ಸಿಲಿಂಡರ್ಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಆದರೆ 14.2 ಕೆಜಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗೆ ನೀಡಲಾಗುತ್ತಿರುವ 300 ರೂ. ಸಬ್ಸಿಡಿ ಮುಂದುವರಿಯಲಿದೆ. ಸಬ್ಸಿಡಿ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.








