ಬೆಂಗಳೂರು: ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಸೇರಿದಂತೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬ ಉದ್ದೇಶವೇ ಸರ್ಕಾರದ್ದಾಗಿದ್ದು, ಯಾವುದೇ ಕಾರಣಕ್ಕೂ ಯೋಜನೆಗಳನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಜನರಿಗಾಗಿ ಜಾರಿಗೆ ತಂದಿರುವ ಈ ಯೋಜನೆಗಳ ಸೌಲಭ್ಯವನ್ನು ಅನ್ಯ ರಾಜ್ಯದವರಿಗೆ ನೀಡಲು ಸಾಧ್ಯವಿಲ್ಲ. ರಾಜ್ಯದ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಲಾಭ ತಲುಪುವಂತೆ ಗುರುತಿನ ಚೀಟಿ ವ್ಯವಸ್ಥೆ ಜಾರಿಗೆ ತರಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದ್ದು, ಅದರ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿರುವ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಯಿಂದ ತಾಲ್ಲೂಕು ಪಂಚಾಯಿತಿ ಮಟ್ಟದವರೆಗೆ ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂಬ ಆರೋಪ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಜನರ ಹಿತದೃಷ್ಟಿಯಿಂದ ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಪುನರುಚ್ಚರಿಸಿದರು.
ಆರಂಭಿಕ ಹಂತದಲ್ಲಿ ಕೆಲವು ಫಲಾನುಭವಿಗಳು ತಪ್ಪು ಮಾಹಿತಿ ಹಾಗೂ ಬೇರೆಯವರ ದೂರವಾಣಿ ಸಂಖ್ಯೆಯನ್ನು ನೀಡಿದ್ದರಿಂದ ಹಣ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವ ಪ್ರಕರಣಗಳು ಕಂಡುಬಂದಿವೆ. ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ತಲುಪುವಂತೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಫಲಾನುಭವಿಗಳು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬಂದಿರುವ ತಾಂತ್ರಿಕ ದೋಷಗಳನ್ನು ಸರಿಪಡಿಸುವ ಕಾರ್ಯ ಮಾತ್ರ ನಡೆಯುತ್ತಿದ್ದು, ಯೋಜನೆಗಳು ಮುಂದುವರಿಯಲಿವೆ ಎಂದು ಅವರು ಹೇಳಿದ್ದಾರೆ.
ಮುಂದಿನ ಎರಡು ವರ್ಷ ಮಾತ್ರವಲ್ಲ, ಮುಂದಿನ ಚುನಾವಣೆಯ ಬಳಿಕವೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಬಿಜೆಪಿ ಆರಂಭದಿಂದಲೇ ಈ ಯೋಜನೆಗಳನ್ನು ವಿರೋಧಿಸುತ್ತಿದ್ದು, ಈಗಲೂ ಸುಳ್ಳು ವದಂತಿಗಳನ್ನು ಹಬ್ಬಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಇನ್ನೊಂದೆಡೆ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳು ನಿರೀಕ್ಷಿತ ರೀತಿಯಲ್ಲಿ ಕಾರ್ಯನಿರ್ವಹಿಸಿಲ್ಲ ಎಂದು ಆರೋಪಿಸಿದ ಅವರು, ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶದಿಂದಲೇ ಯೋಜನೆಗಳ ಪರಿಷ್ಕರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.ಇದನ್ನು ಓದಿ –ಮೈಸೂರಿನ ಪಬ್‌ನಲ್ಲಿ ಅಗ್ನಿ ಅವಘಡ: ಇಬ್ಬರು ಸಜೀವ ದಹನ
ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗಲೇ ಸ್ಪಷ್ಟ ಷರತ್ತುಗಳನ್ನು ತಿಳಿಸಬೇಕಾಗಿತ್ತು. ಈಗ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ಇಂತಹ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.








