ನವದೆಹಲಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲು ಸಾಧ್ಯವಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಬೇಕಿದ್ದ ಕೆಲವರು ಪಕ್ಷಕ್ಕೆ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿದ ಅವರು, ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಟಿಕೆಟ್ ಪಡೆದು ಗೆಲುವು ಸಾಧಿಸಿದವರು ಇದೀಗ ಪಕ್ಷದ ನಂಬಿಕೆಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದರು.
ಪಕ್ಷದೊಳಗೆ ನಡೆದಿರುವ ಈ ಬೆಳವಣಿಗೆ ಅತ್ಯಂತ ಬೇಸರದ ಸಂಗತಿಯಾಗಿದೆ. ಕೆಲವರನ್ನು ಹಣದ ಆಮಿಷ ಹಾಗೂ ಒತ್ತಡದ ಮೂಲಕ ಅಡ್ಡಮತದಾನಕ್ಕೆ ಪ್ರೇರೇಪಿಸಲಾಗಿದೆ ಎಂಬ ಅನುಮಾನವಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ, ರಾಜ್ಯದ ಜನರಿಗೆ ನೀತಿ ಪಾಠ ಹೇಳುವ ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದ ತಕ್ಷಣವೇ ಭ್ರಷ್ಟಾಚಾರದ ಹಾದಿ ಹಿಡಿದಿದ್ದಾರೆ ಎಂದು ಆರೋಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ಅವರು ಪರೋಕ್ಷ ಟೀಕೆ ವ್ಯಕ್ತಪಡಿಸಿದರು.
ಇಂದು ಮಧ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಹತ್ವದ ಸಭೆ ನಿಗದಿಯಾಗಿದ್ದು, ಬಳಿಕ ಪಕ್ಷದ ಹಿರಿಯ ನಾಯಕ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಪರಿಷತ್ ಚುನಾವಣೆಯ ಅಡ್ಡಮತದಾನಕ್ಕೆ ಸಂಬಂಧಿಸಿದ ಎಲ್ಲಾ ಬೆಳವಣಿಗೆಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಪಕ್ಷದ ಹೈಕಮಾಂಡ್ ನೀಡುವ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಅಡ್ಡಮತದಾನ ಮಾಡಿದವರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಅಡ್ಡಮತದಾನ ಮಾಡಿದವರು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಬೇಕು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅಶೋಕ, ಆ ವಿಷಯದ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದು ಸ್ಪಷ್ಟಪಡಿಸಿದರು.ಇದನ್ನು ಓದಿ –ಬಿಎಂಟಿಸಿ ಮಾಸಿಕ ಬಸ್ ಪಾಸ್ ದರ ಏರಿಕೆ
ವಿಧಾನ ಪರಿಷತ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ರಹಸ್ಯ ಸಭೆ ನಡೆದಿತ್ತು ಎಂಬ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆ ಹೇಳಿಕೆಯ ಸಂಪೂರ್ಣ ಮಾಹಿತಿ ನನಗೆ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.








