ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಸಮೀಪದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಲವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾವೇರಿ ಕಂಪನಿಗೆ ಸೇರಿದ ಕ್ವಾರಿಯಲ್ಲಿ ಇಂದು ಬೆಳಗ್ಗೆ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸುಮಾರು 100 ಅಡಿ ಎತ್ತರದಲ್ಲಿ ಹಿಟಾಚಿ ಯಂತ್ರದ ಮೂಲಕ ಕ್ವಾರಿಯ ಪ್ರದೇಶವನ್ನು ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿತ್ತು. ಇದೇ ವೇಳೆ ಕೆಳಭಾಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಹಿಟಾಚಿ ಯಂತ್ರದ ಚಾಲಕ ಕೆಳಭಾಗದಲ್ಲಿ ಕಾರ್ಮಿಕರು ಇರುವುದನ್ನು ಗಮನಿಸದೆ ಎರಡು-ಮೂರು ಬೃಹತ್ ಬಂಡೆಗಳನ್ನು ಕೆಳಕ್ಕೆ ತಳ್ಳಿದ್ದರಿಂದ ಅವು ಕಾರ್ಮಿಕರ ಮೇಲೆ ಬಿದ್ದಿವೆ. ಪರಿಣಾಮ ಸ್ಥಳದಲ್ಲೇ ಏಳು ಮಂದಿ ಸಾವನ್ನಪ್ಪಿದ್ದಾರೆ.
ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಾವರೆಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಸಾರಿಗೆ ನೌಕರರಿಗೆ 12.5% ವೇತನ ಹೆಚ್ಚಳ
ಮೃತ ಕಾರ್ಮಿಕರು ಬಿಹಾರ ಮೂಲದ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.








