ಬೆಂಗಳೂರು: ಆಗಸ್ಟ್ 6ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ರಾಜ್ಯ ಸಚಿವ ಸಂಪುಟವನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹೈಕಮಾಂಡ್ನಿಂದ ಸಮಯ ದೊರೆತ ತಕ್ಷಣ ದೆಹಲಿಗೆ ತೆರಳಿ ಚರ್ಚೆ ನಡೆಸುವುದಾಗಿ ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೂರು–ನಾಲ್ಕು ದಿನಗಳಲ್ಲಿ ಹೈಕಮಾಂಡ್ ನಾಯಕರು ಸಮಯ ನೀಡಲಿದ್ದಾರೆ. ಸಮಯ ನಿಗದಿಯಾದ ಕೂಡಲೇ ದೆಹಲಿಗೆ ತೆರಳುತ್ತೇನೆ. ಅಲ್ಲಿಯೂ ಕೆಲವು ಅಧಿಕೃತ ಕೆಲಸಗಳಿವೆ. ಅಧಿವೇಶನ ಆರಂಭಕ್ಕೂ ಮುನ್ನ ಸಂಪುಟ ವಿಸ್ತರಣೆ ಪೂರ್ಣಗೊಳಿಸುವ ಉದ್ದೇಶವಿದೆ” ಎಂದು ತಿಳಿಸಿದರು.
ಜೂನ್ 3ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರೊಂದಿಗೆ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಸರ್ಕಾರ ರಚನೆಯಾಗಿ ಒಂದೂವರೆ ತಿಂಗಳು ಕಳೆದರೂ ಸಂಪೂರ್ಣ ಸಚಿವ ಸಂಪುಟ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ.
ಸಚಿವ ಸ್ಥಾನಕ್ಕಾಗಿ ಹೆಚ್ಚಿದ ಒತ್ತಡ
ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರು, ಮಾಜಿ ಸಚಿವರು, ಮೊದಲ ಬಾರಿಗೆ ಆಯ್ಕೆಯಾದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಹಿಳಾ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಜಿಲ್ಲಾವಾರು, ಜಾತಿವಾರು ಹಾಗೂ ಪಕ್ಷದ ನಿಷ್ಠೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ಮುಖ್ಯಮಂತ್ರಿ ಮೇಲೆ ಒತ್ತಡ ಹೆಚ್ಚಾಗಿದೆ.
ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ತಮ್ಮ ಬೆಂಬಲಕ್ಕೆ ನಿಂತಿದ್ದವರಿಗೆ ಸಚಿವ ಸ್ಥಾನ ಕಲ್ಪಿಸಲು ಮುಖ್ಯಮಂತ್ರಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗ ಶಾಸಕರು ಹಾಗೂ ಮಾಜಿ ಸಚಿವರು ಕೂಡ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಅವರ ಮೂಲಕ ಹೈಕಮಾಂಡ್ಗೆ ಶಿಫಾರಸು ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೂಡ ತಮ್ಮ ಬೆಂಬಲಿಗರಿಗೆ ಅವಕಾಶ ದೊರಕಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶೀಘ್ರದಲ್ಲೇ ಅಂತಿಮ ನಿರ್ಧಾರ: ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಚಿವ ಸಂಪುಟ ವಿಸ್ತರಣೆ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸಕ್ಕೆ ಶಾಸಕರಾದ ಟಿ.ಡಿ. ರಾಜೇಗೌಡ, ಅಶೋಕ ಪಟ್ಟಣ ಹಾಗೂ ಕೆ.ಎಂ. ಶಿವಲಿಂಗೇಗೌಡ ಭೇಟಿ ನೀಡಿ, ಸಂಪುಟ ವಿಸ್ತರಣೆಯಲ್ಲಿ ತಮ್ಮನ್ನು ಪರಿಗಣಿಸುವಂತೆ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿದ ಖರ್ಗೆ, “ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಬೇಗ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು” ಎಂದು ಹೇಳಿದರು.
ಶಾಸಕ ಅಶೋಕ ಪಟ್ಟಣ ಮಾತನಾಡಿ, “ಸಚಿವ ಸಂಪುಟವನ್ನು ಆದಷ್ಟು ಬೇಗ ವಿಸ್ತರಿಸುವಂತೆ ಮನವಿ ಮಾಡಿದ್ದೇವೆ. ರಾಜ್ಯ ನಾಯಕರು ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ದೆಹಲಿಗೆ ತೆರಳುವ ಸಾಧ್ಯತೆ ಇದೆ” ಎಂದು ತಿಳಿಸಿದರು.ಇದನ್ನು ಓದಿ –UG-CET ಮೊದಲ ಸುತ್ತಿನ ಫಲಿತಾಂಶ ಪ್ರಕಟ
ಜಾತಿಗಿಂತ ಪಕ್ಷದ ನಿಷ್ಠೆ ಮತ್ತು ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವಂತೆ ಪಕ್ಷದ ಹಿರಿಯ ನಾಯಕರಿಗೆ ಮನವಿ ಮಾಡಿರುವುದಾಗಿ ಅವರು ಹೇಳಿದರು.








