ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳ ಅನುಭವಿಸಿದ್ದಾನೆ ಎಂಬ ಆರೋಪದ ನಡುವೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮರಿಯಪ್ಪನಪಾಳ್ಯ ನಿವಾಸಿಯಾದ 13 ವರ್ಷದ ಬಾಲಕ ಸ್ಥಳೀಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಅಮಾನವೀಯವಾಗಿ ಹಲ್ಲೆ ನಡೆಸಿ ದೈಹಿಕವಾಗಿ ಹಿಂಸೆ ನೀಡಿದ್ದರೆಂದು ಆರೋಪಿಸಲಾಗಿದೆ. ಶಿಕ್ಷಕರ ವರ್ತನೆ ಹಾಗೂ ಶಾಲಾ ಆಡಳಿತದಿಂದ ನಿರಂತರ ಒತ್ತಡಕ್ಕೆ ಒಳಗಾಗಿದ್ದ ವಿದ್ಯಾರ್ಥಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾನೆ ಎನ್ನಲಾಗಿದೆ.
ಮನನೊಂದ ವಿದ್ಯಾರ್ಥಿ ತನ್ನ ಮನೆಯ ಕಟ್ಟಡದ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ನಾಯಂಡಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಗಾಯಾಳು ವಿದ್ಯಾರ್ಥಿಯ ತಂದೆ ಮಹೇಶ್ ಕುಮಾರ್ ಕಿರಾಣಿ ಅಂಗಡಿ ನಡೆಸುತ್ತಿದ್ದು, ತಾಯಿ ಕುಸುಮ ಕೂಡ ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಗನ ಸ್ಥಿತಿ ಕಂಡು ಪೋಷಕರು ಹಾಗೂ ಕುಟುಂಬಸ್ಥರು ಶಾಲಾ ಆಡಳಿತ ಮಂಡಳಿ ಮತ್ತು ಸಂಬಂಧಪಟ್ಟ ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಯ ಆತ್ಮಹತ್ಯೆ ಯತ್ನಕ್ಕೆ ಶಾಲೆಯಲ್ಲಿನ ಕಿರುಕುಳವೇ ಕಾರಣವೇ ಅಥವಾ ಬೇರೆ ಯಾವುದೇ ಹಿನ್ನೆಲೆ ಇದೆಯೇ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.ಇದನ್ನು ಓದಿ –ಹೈಕಮಾಂಡ್ ಭೇಟಿ ಬಳಿಕ ಸಂಪುಟ ವಿಸ್ತರಣೆ: ಸಿ.ಎಂ ಡಿಕೆಶಿ
ಈ ಸಂಬಂಧ ವಿದ್ಯಾರ್ಥಿಯ ಪೋಷಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಶಾಲಾ ಆಡಳಿತ ಮಂಡಳಿ ಹಾಗೂ ಸಂಬಂಧಿತ ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.








