ಬೆಂಗಳೂರು: ರಾಜ್ಯದ ನಾಗರಿಕರಿಗೆ ಸರ್ಕಾರಿ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಶಾಶ್ವತ ನಿವಾಸ ಪ್ರಮಾಣ ಪತ್ರ ಹಾಗೂ ಜಾತಿ ಪ್ರಮಾಣ ಪತ್ರವನ್ನು ಮನೆ ಬಾಗಿಲಿಗೇ ತಲುಪಿಸುವ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಯೋಜನೆಗೆ ಅಧಿಕೃತ ಚಾಲನೆ ನೀಡಿದರು.
ನಾಳೆಯಿಂದಲೇ ರಾಜ್ಯಾದ್ಯಂತ ಈ ಯೋಜನೆ ಜಾರಿಗೆ ಬರಲಿದ್ದು, ಈಗಾಗಲೇ ಸುಮಾರು 4.85 ಕೋಟಿ ಕುಟುಂಬಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾಧಿಕಾರಿಗಳಿಗೆ ಸರ್ಕಾರ ರವಾನಿಸಿದೆ. ಸಾರ್ವಜನಿಕರು ಅರ್ಜಿ ಸಲ್ಲಿಸಿದ ಬಳಿಕ ಅಧಿಕಾರಿಗಳು ಮನೆ ಬಾಗಿಲಿಗೇ ತೆರಳಿ ಶಾಶ್ವತ ನಿವಾಸ ಪ್ರಮಾಣ ಪತ್ರ ಹಾಗೂ ಜಾತಿ ಪ್ರಮಾಣ ಪತ್ರ ವಿತರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕವು ನಾಗರಿಕರ ಹಕ್ಕುಗಳ ರಕ್ಷಣೆಗೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸದಾ ಮುಂಚೂಣಿಯಲ್ಲಿದೆ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ಮನೆ ಬಾಗಿಲಿಗೆ ಪಹಣಿ ತಲುಪಿಸುವ ಯೋಜನೆ ಆರಂಭವಾಗಿತ್ತು. ಅದೇ ಮಾದರಿಯಲ್ಲಿ ಈಗ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಉಚಿತವಾಗಿ ಮನೆ ಮನೆಗೆ ತಲುಪಿಸುವ ಐತಿಹಾಸಿಕ ಕಾರ್ಯಕ್ರಮವನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಚುನಾವಣಾ ಆಯೋಗ ಗುರುತಿಸಿರುವ 11 ದಾಖಲೆಗಳಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರವೂ ಒಂದಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕರಿಗೆ ಅಗತ್ಯ ದಾಖಲೆಗಳನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ದೇಶದಲ್ಲಿಯೇ ಸುಮಾರು 4.85 ಕೋಟಿ ಕುಟುಂಬಗಳಿಗೆ ಮನೆ ಬಾಗಿಲಿಗೇ ಈ ದಾಖಲೆಗಳನ್ನು ತಲುಪಿಸುವ ಕಾರ್ಯ ಕೈಗೊಂಡ ಮೊದಲ ರಾಜ್ಯ ಕರ್ನಾಟಕ ಎಂಬ ಹೆಮ್ಮೆ ನಮಗಿದೆ. ಸರ್ಕಾರ ಚುನಾವಣಾ ಆಯೋಗದ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು, ನಾಗರಿಕರಿಗೆ ಅಗತ್ಯ ಪ್ರಮಾಣ ಪತ್ರಗಳನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಅರ್ಜಿ ಸಲ್ಲಿಸುವುದು ಹೇಗೆ?
ಶಾಶ್ವತ ನಿವಾಸ ಹಾಗೂ ಜಾತಿ ಪ್ರಮಾಣ ಪತ್ರಕ್ಕಾಗಿ ಸಾರ್ವಜನಿಕರು ಆನ್‌ಲೈನ್ ಮೂಲಕ, ಸೇವಾ ಕೇಂದ್ರಗಳಲ್ಲಿ ಅಥವಾ ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಫೆಸಿಲಿಟೇಷನ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ನೀಡುವ ಅರ್ಜಿಗಳನ್ನು ಭರ್ತಿ ಮಾಡಿ ಅವರಿಗೆ ಸಲ್ಲಿಸುವ ಅವಕಾಶವೂ ಕಲ್ಪಿಸಲಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಇರುವುದರಿಂದ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗುತ್ತದೆ. ಜನರ ಗುರುತು ಮತ್ತು ಹಕ್ಕುಗಳನ್ನು ಬಲಪಡಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ ಎಂದು ಡಿಸಿಎಂ ಹೇಳಿದರು.
ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ತಪ್ಪಿಸಲು ಹಾಗೂ ಸರ್ಕಾರದ ಸೇವೆಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸಲು ಈ ಯೋಜನೆ ರೂಪಿಸಲಾಗಿದೆ. ಈ ಕಾರ್ಯ ಯಶಸ್ವಿಯಾಗಲು ಶ್ರಮಿಸುತ್ತಿರುವ ಗ್ರಾಮ ಲೆಕ್ಕಿಗರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸೇವೆ ಶ್ಲಾಘನೀಯ ಎಂದು ಅವರು ಹೇಳಿದರು.
ಸರ್ಕಾರ ರೂಪಿಸುವ ನೀತಿಗಳು ಮತ್ತು ನಿಯಮಗಳು ಆಡಳಿತ ವ್ಯವಸ್ಥೆಯ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಾಗ ಮಾತ್ರ ಅವುಗಳ ಉದ್ದೇಶ ಸಾರ್ಥಕವಾಗುತ್ತದೆ. ಈ ಯೋಜನೆಯು ಜನಸ್ನೇಹಿ ಆಡಳಿತದತ್ತ ಸರ್ಕಾರ ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.








