ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, 8 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಇದರ ಜೊತೆಗೆ ಕೊಡಗು, ಹಾಸನ, ಧಾರವಾಡ, ಗದಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ಒಟ್ಟು 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಇದನ್ನು ಓದಿ –ವಿನಯ ಕುಲಕರ್ಣಿಗೆ ಹೈಕೋರ್ಟ್ ರಿಲೀಫ್
ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.








