ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದಡಿ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ‘ಶೂನ್ಯ ಎಫ್‌ಐಆರ್’ ಅನ್ನು ಘಟನೆ ನಡೆದ ಸ್ಥಳದ ವ್ಯಾಪ್ತಿಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಆರಂಭಿಸಿದ್ದು, ದೂರುದಾರರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.
ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ತನ್ನ ಪುತ್ರನಿಂದ ವಚನಾನಂದ ಶ್ರೀ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿ ಬಾಲಕನ ತಾಯಿ ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ ದೂರು ನೀಡಿದ್ದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಪ್ರತಿಕ್ರಿಯಿಸಿ, ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ. ತನಿಖೆ ಆರಂಭವಾಗಿದ್ದು, ಸಂತ್ರಸ್ತ ಬಾಲಕನ ಹೇಳಿಕೆಯನ್ನು ಕೂಡ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ ಟ್ರಸ್ಟ್, ವಚನಾನಂದ ಶ್ರೀ ಅವರನ್ನು ಪೀಠದಿಂದ ಪದಚ್ಯುತಗೊಳಿಸಿತ್ತು. ಬಳಿಕ ಮಠದಲ್ಲಿದ್ದ ಮಕ್ಕಳಿಂದ ಸ್ವಾಮೀಜಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಠಕ್ಕೆ ಭೇಟಿ ನೀಡಿ, ವಚನಾನಂದ ಶ್ರೀ ಸೇರಿದಂತೆ ಹಲವು ಮಂದಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು.



