ನವದೆಹಲಿ: ವೈದ್ಯಕೀಯ ಶಿಕ್ಷಣ ಪ್ರವೇಶಾತಿಗೆ ದೇಶಾದ್ಯಂತ ನಡೆಸಿದ್ದ ನೀಟ್ ಯುಜಿ ಪರೀಕ್ಷೆಯನ್ನು ಅಕ್ರಮದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ರದ್ದುಗೊಳಿಸಿ ಆದೇಶಿಸಿದೆ. ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಪರೀಕ್ಷೆ ಬರೆದಿದ್ದ ಲಕ್ಷಾಂತರ ಆಕಾಂಕ್ಷಿಗಳಿಗೆ ಇದರಿಂದ ನಿರಾಸೆ ಆಗಿದೆ. ಅಲ್ಲದೆ, ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಬೇಕಾದ ಆತಂಕದಲ್ಲಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪರೀಕ್ಷಾ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ.
ಭಾರತದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಯುಜಿ 2026 ಅನ್ನು ‘ಗೆಸ್ ಪತ್ರಿಕೆ’ ಸೋರಿಕೆ ಆರೋಪದ ನಂತರ ರದ್ದುಪಡಿಸಲಾಗಿದೆ. ಮೇ 3ರಂದು ನಡೆದ ಪರೀಕ್ಷೆಯ ಸಮಗ್ರತೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳಿAದ ಬಂದ ಮಾಹಿತಿಗಳು ಕಳವಳಕಾರಿಯಾಗಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.
ಕಾನೂನು ಜಾರಿ ಸಂಸ್ಥೆಗಳು ಹಂಚಿಕೊAಡ ಮಾಹಿತಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ. ಅಭ್ಯರ್ಥಿಗಳು ಎನ್ ಟಿಎ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಬೇಕು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ತಪ್ಪು ಮಾಹಿತಿಯನ್ನು ನಂಬಬಾರದು. ವಿದ್ಯಾರ್ಥಿಗಳು ಮತ್ತೆ ತಯಾರಿ ಮಾಡಿಕೊಂಡು ಪರೀಕ್ಷೆಗೆ ಸಿದ್ಧರಾಗಿರಬೇಕು ಎಂದು ಎನ್ ಟಿಎ ತಿಳಿಸಿದೆ.
ಸಿಬಿಐ ತನಿಖೆಗೆ ಆದೇಶ
ರಾಜಸ್ಥಾನದಲ್ಲಿ ಸೋರಿಕೆ ಆಗಿದ್ದ ಊಹಾತ್ಮಕ ಪ್ರಶ್ನೆ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎನ್ನಲಾಗಿತ್ತು. ಕಳೆದ ಮೇ 3ರಂದು ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಆದರೆ ರಾಜಸ್ಥಾನದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿ ಹರಿದಾಡಿದ್ದವು. ಈ ಬಗ್ಗೆ ಮೇ 8ರಂದು ಎನ್‌ಟಿಎ ಕೇಂದ್ರ ತನಿಖಾ ಸಂಸ್ಥೆಗೆ ಸ್ವತಂತ್ರ ಪರಿಶೀಲನೆ ನಡೆಸುವಂತೆ ಮನವಿ ಮಾಡಿತ್ತು. ತನಿಖಾ ಸಂಸ್ಥೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ನೀಡಿದ ವರದಿಯನ್ನು ಅಧರಿಸಿ, ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.
ಹೀಗಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಗ ಮಧ್ಯೆ ಪ್ರವೇಶಿಸಿದೆ. ಸಿಬಿಐ ತನಿಖೆಗೆ ಆದೇಶಿಸಿದೆ. ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು ಈ ಆಪಾದಿತ ಅವ್ಯವಹಾರಗಳ ಕುರಿತು ತನಿಖೆ ಆರಂಭಿಸಿದೆ. ಸೋರಿಕೆಯಾದ ಮಾಹಿತಿ ಸಿಕ್ಕಿದ ಕೂಡಲೇ ಎನ್‌ಟಿಎ ಇದನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿತ್ತು.
2024 ಮತ್ತು 2025ರಲ್ಲೂ ಇಂತಹದೇ ಆರೋಪಗಳು ಕೇಳಿಬಂದಿದ್ದವು. 2024ರ ಪ್ರಕರಣದಲ್ಲಿ ಸಿಬಿಐ ಪಾಟ್ನಾ ಮತ್ತು ಹಜಾರಿಬಾಗ್‌ನಲ್ಲಿ ಕೆಲವು ಆರೋಪಿಗಳನ್ನು ಬಂಧಿಸಿತ್ತು.








