ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರ ತೀವ್ರವಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಹಿಂದೂ ಯುವಕರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಘಟನೆಗಳು ದೇಶದಲ್ಲಿ ಕೋಮು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿವೆ.
ಸೋಮವಾರ ರಾತ್ರಿ ಸುಮಾರು 10 ಗಂಟೆಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್‌ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ಹರಿತ ಆಯುಧಗಳಿಂದ ದಾಳಿ ನಡೆಸಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಳಿ ನಡೆಸಿದವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ರಾಜಧಾನಿ ಢಾಕಾಕ್ಕೆ ಸಮೀಪದಲ್ಲೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ಇದಕ್ಕೂ ಕೆಲ ಗಂಟೆಗಳ ಮೊದಲು, ಸೋಮವಾರ ಸಂಜೆ ಜಶೋರ್ ಜಿಲ್ಲೆಯ ಮಣಿರಾಂಪುರ ಉಪಜಿಲ್ಲಾದ ಕೊಪಾಲಿಯಾ ಬಜಾರ್‌ನಲ್ಲಿ 45 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಐಸ್ ಕಾರ್ಖಾನೆ ಮಾಲೀಕರಾಗಿದ್ದ ರಾಣಾ ಪ್ರತಾಪ್, ನರೈಲ್ ಜಿಲ್ಲೆಯ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾರ್ಖಾನೆಯಿಂದ ಹೊರಗೆಳೆದು, ಗಲ್ಲಿಯೊಂದರಲ್ಲಿ ತಲೆಗೆ ಹಲವು ಬಾರಿ ಗುಂಡು ಹಾರಿಸಿ, ಕುತ್ತಿಗೆ ಕೊಯ್ದು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಬಳಿ ಏಳು ಖಾಲಿ ಕಾರ್ಟ್ರಿಡ್ಜ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಳೆದ 18 ದಿನಗಳಲ್ಲಿ ಇದು ಆರನೇ ಹಿಂದೂ ವ್ಯಕ್ತಿಯ ಹತ್ಯೆಯಾಗಿದೆ. ಶೇಖ್ ಹಸೀನಾ ಸರ್ಕಾರ ಪತನಗೊಂಡ ಬಳಿಕ ಮತ್ತು ಮಧ್ಯಂತರ ಆಡಳಿತದ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹೆಚ್ಚಾಗಿವೆ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ. ದುರ್ಬಲಗೊಂಡ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಬಳಸಿಕೊಂಡು, ಧರ್ಮನಿಂದನೆ ಆರೋಪಗಳು ಅಥವಾ ವೈಯಕ್ತಿಕ ದ್ವೇಷದ ನೆಪದಲ್ಲಿ ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದೆ ಎನ್ನಲಾಗಿದೆ.
ಈ ಹಿಂಸಾಚಾರ ಕುರಿತು ಪ್ರತಿಕ್ರಿಯಿಸಿರುವ ಭಾರತ ಸರ್ಕಾರ, ಹಿಂದೂಗಳು, ಕ್ರೈಸ್ತರು, ಬೌದ್ಧರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ನಡೆಯುತ್ತಿರುವ ದಾಳಿಗಳನ್ನು ಖಂಡಿಸಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ಸಹಿಸಲಾಗುವುದಿಲ್ಲ ಎಂದು ಹೇಳಿರುವ ಭಾರತ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಪರಾಧಿಗಳನ್ನು ನ್ಯಾಯಾಲಯದ ಮುಂದೆ ನಿಲ್ಲಿಸುವಂತೆ ಆಗ್ರಹಿಸಿದೆ. ಬಾಂಗ್ಲಾದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕು ಎಂಬ ಆಶಯವನ್ನೂ ವ್ಯಕ್ತಪಡಿಸಿದೆ.
ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್, ಅಲ್ಪಸಂಖ್ಯಾತರ ವಿರುದ್ಧ ನಿರಂತರ ಹಗೆತನ ಗಂಭೀರ ಕಳವಳಕಾರಿಯಾಗಿದೆ ಎಂದು ಹೇಳಿದ್ದು, ಈ ಘಟನೆಗಳನ್ನು ಮಾಧ್ಯಮ ಉತ್ಪ್ರೇಕ್ಷೆ ಅಥವಾ ಸಾಮಾನ್ಯ ರಾಜಕೀಯ ಹಿಂಸಾಚಾರವೆಂದು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅವಧಿಯಲ್ಲಿ 2,900ಕ್ಕೂ ಹೆಚ್ಚು ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಘಟನೆಗಳು ದಾಖಲಾಗಿವೆ ಎಂದು ಸ್ವತಂತ್ರ ಮೂಲಗಳು ತಿಳಿಸಿರುವುದಾಗಿ ಅವರು ಹೇಳಿದ್ದಾರೆ.








