ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಉನ್ನತ ಪೊಲೀಸ್ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಪ್ರಕರಣದ ನಿರ್ವಹಣೆಯಲ್ಲಿನ ಲೋಪದ ಹಿನ್ನೆಲೆಯಲ್ಲಿ ಬಳ್ಳಾರಿ ವಲಯದ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈಗಾಗಲೇ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ, ಇದೀಗ ಐಜಿ ಮಟ್ಟದ ಅಧಿಕಾರಿಗೂ ಕ್ರಮ ಜರುಗಿದೆ. ಸರ್ಕಾರದ ಆದೇಶದಂತೆ, ಬಳ್ಳಾರಿ ವಲಯದ ನೂತನ ಐಜಿ ಆಗಿ ಹರ್ಷ ಗುಪ್ತಾ ಅವರನ್ನು ಹಾಗೂ ನೂತನ ಎಸ್‌ಪಿ ಆಗಿ ಡಾ. ಸುಮನ್ ಡಿ. ಪೆನ್ನೇಕರ್ ಅವರನ್ನು ನೇಮಕ ಮಾಡಲಾಗಿದೆ.
ಜನವರಿ 1ರಂದು ಪವನ್ ನೆಜ್ಜೂರು ಅವರು ಬಳ್ಳಾರಿ ಎಸ್‌ಪಿಯಾಗಿ ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಆದರೆ ಬ್ಯಾನರ್ ಗಲಾಟೆ ಪ್ರಕರಣವನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಆರೋಪದ ಮೇರೆಗೆ ಅವರನ್ನು ಅಮಾನತುಗೊಳಿಸಲಾಗಿತ್ತು.
ಇದಲ್ಲದೆ, ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್ ಅವರು ಈ ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ಸಮಯಕ್ಕೆ ಸರಿಯಾಗಿ ತರಲಿಲ್ಲ ಎಂಬ ಆರೋಪವೂ ಕೇಳಿಬಂದಿತ್ತು. ಈ ಸಂಬಂಧ ಡಿಜಿ–ಐಜಿಪಿ ಕಚೇರಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದ್ದು, ಅದರ ಆಧಾರದ ಮೇಲೆ ಸರ್ಕಾರ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಕ್ರಮ ಕೈಗೊಂಡಿದೆ.








