ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 4 ತಿಂಗಳಿನಿಂದ ಜೈಲು ಪಾಲಾಗಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿ ಹೊಸ ವರ್ಷದ ಹೊತ್ತಲ್ಲಿ ಬಿಗ್ ರಿಲೀಫ್ ನೀಡಿದೆ.
ಜಾಮೀನು ಕೋರಿ ವೀರೇಂದ್ರ ಪಪ್ಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.ಇದನ್ನು ಓದಿ –ವಿ.ಬಿ–ಜಿ ರಾಮ್ ಜಿ ಕಾಯ್ದೆ ವಿರೋಧ: ಪ್ರಧಾನಿಗೆ ಸಿಎಂ ಪತ್ರ
ಬೆಂಗಳೂರು, ಚಿತ್ರದುರ್ಗ, ಹುಬ್ಬಳ್ಳಿ, ಗೋವಾ, ಮುಂಬೈ ಸೇರಿದಂತೆ ಪಪ್ಪಿಗೆ ಸಂಬಂಧಿಸಿದ ಎಲ್ಲ ಸ್ಥಳಗಳ ಮೇಲೆ ರೇಡ್ ನಡೆದಿತ್ತು. ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ್ದ ಅಧಿಕಾರಿಗಳು, ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ಮತ್ತು ವಾಹನಗಳನ್ನು ಜಪ್ತಿ ಮಾಡಿದ್ದರು.








