ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಫೋಟದ ಪರಿಣಾಮವಾಗಿ ಬಿಸಿ ಪದಾರ್ಥಗಳು ಕಾರ್ಮಿಕರ ಮೈಮೇಲೆ ಬಿದ್ದಿದ್ದು, ಕೆಲವರು ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೈಲಹೊಂಗಲದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ವಿಕ್ರಮ ಇನಾಮದಾರ್ ಅವರಿಗೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಬಾಯ್ಲರ್ ಸ್ಫೋಟದಿಂದ ಎಂಟು ಜನರಿಗೆ ಬಿಸಿ ಮಳ್ಳಿ ಮೈಮೇಲೆ ಬಿದ್ದು ಗಾಯಗಳಾಗಿವೆ. ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಬೆಳಗಾವಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.ಇದನ್ನು ಓದಿ –ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ
ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.








