ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರ ಖಾತೆ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ ಹಾಗೂ ಖಾತೆ ಮರುಹಂಚಿಕೆ ಕುರಿತಂತೆ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಪ್ರವಾಸದ ವೇಳೆ ಅವರು ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಹಲವು ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.
ದೆಹಲಿ ತಲುಪಿದ ಬಳಿಕ ಡಿಕೆ ಶಿವಕುಮಾರ್ ಎಐಸಿಸಿ ನಾಯಕರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳು ಹಾಗೂ ಸರ್ಕಾರದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಿದ್ದಾರೆ. ಬಳಿಕ ಎಐಸಿಸಿ ಕಚೇರಿ ಹಾಗೂ ಪಕ್ಷದ ವಿವಿಧ ಮುಂಭಾಗದ ಘಟಕಗಳ ಕಚೇರಿಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ ಹಿರಿಯ ಐಎಎಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಗುರುವಾರ ನಡೆಯಲಿರುವ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪ್ರತ್ಯೇಕವಾಗಿ ಭೇಟಿಯಾಗಲು ಸಮಯ ಕೋರಿರುವುದಾಗಿ ತಿಳಿದುಬಂದಿದೆ.
ಇನ್ನು ಕರ್ನಾಟಕ ಭವನದ ಕಾರ್ಯವೈಖರಿ ಕುರಿತು ಈ ಹಿಂದೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿಎಂ ಡಿಕೆ ಶಿವಕುಮಾರ್ ಅವರ ಆಗಮನಕ್ಕೆ ಕರ್ನಾಟಕ ಭವನದಲ್ಲಿ ವಿಶೇಷ ಸಿದ್ಧತೆಗಳು ನಡೆದಿವೆ. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭವನವನ್ನು ತಳಿರು ತೋರಣ, ಹೂವಿನ ಅಲಂಕಾರಗಳಿಂದ ಸಿಂಗರಿಸಲಾಗಿದ್ದು, ಅದ್ಧೂರಿ ಸ್ವಾಗತಕ್ಕೆ ಸಿಬ್ಬಂದಿ ಸಜ್ಜಾಗಿದ್ದಾರೆ.
ಸಂಜೆ ನಡೆಯಲಿರುವ ಹಿರಿಯ ಐಎಎಸ್ ಅಧಿಕಾರಿಗಳ ಸಭೆಗೆ ಮುನ್ನ ಕರ್ನಾಟಕ ಭವನ ಆವರಣವನ್ನು ಸ್ವಚ್ಛಗೊಳಿಸಿ, ಮುಖ್ಯಮಂತ್ರಿ ಸ್ವಾಗತಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.








