ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಪಕ್ಷದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು, ಎಲ್ಲರ ಅಭಿಪ್ರಾಯ ಪಡೆದು ಹೊಸ ಮುಖಗಳು, ಜಿಲ್ಲಾವಾರು ಮತ್ತು ಪ್ರಾಂತ್ಯವಾರು ಸಮತೋಲನವನ್ನು ಪರಿಗಣಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ಹೊಸ ಸಚಿವರ ಪ್ರಮಾಣ ವಚನಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಅನುಮತಿ ಪಡೆಯಲಾಗಿತ್ತು. ಆದರೆ ನಿಗದಿಯಾಗಿದ್ದ ಸಭೆ ಕಾರಣಾಂತರಗಳಿಂದ ನಡೆಯದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರ ಮುಂದೂಡಲಾಗಿದೆ ಎಂದು ತಿಳಿಸಿದರು.
ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವ ವಿಚಾರ ಪ್ರಸ್ತಾಪಿಸಿದ ಡಿ.ಕೆ. ಶಿವಕುಮಾರ್, ತಮ್ಮನ್ನೂ ಪೊಲೀಸರು ಎಳೆದೊಯ್ಯಲು ಮುಂದಾದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯಪ್ರವೇಶಿಸಿ ತಡೆಯಲು ಸೂಚಿಸಿದ್ದರು ಎಂದು ಹೇಳಿದರು.
ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸೂಕ್ತವಲ್ಲ ಎಂದರು. ಹಿಂದೆ ಶಾಸಕರಾಗದವರಿಗೂ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರಿಗೂ ಸಚಿವ ಸ್ಥಾನ ನೀಡಿದ ಉದಾಹರಣೆಗಳಿವೆ ಎಂದು ನೆನಪಿಸಿದರು.
ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ಅಗತ್ಯವಿದ್ದರೆ ಹೊಸ ಪ್ರಯೋಗಗಳನ್ನೂ ಮಾಡಲಾಗುತ್ತದೆ. ಪಕ್ಷದ ನಾಯಕರು ಚರ್ಚಿಸಿ ತೆಗೆದುಕೊಳ್ಳುವ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.
ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಆಶಯ
ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಸಚಿವ ಸ್ಥಾನಗಳ ಜೊತೆಗೆ ಮುಖ್ಯ ಸಚೇತಕ, ವಿಧಾನ ಪರಿಷತ್ ಸಭಾಪತಿ ಹಾಗೂ ವಿಧಾನಸಭೆ ಸ್ಪೀಕರ್ ಸೇರಿದಂತೆ ಇತರ ಪ್ರಮುಖ ಹುದ್ದೆಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಅವಕಾಶ ದೊರೆತರೆ ಇಂದೇ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲು ಸಿದ್ಧನಿದ್ದೇನೆ. ಈ ಪ್ರಕ್ರಿಯೆ ಅನಗತ್ಯವಾಗಿ ವಿಳಂಬವಾಗುವುದು ನನಗೂ ಇಷ್ಟವಿಲ್ಲ ಎಂದು ಹೇಳಿದರು.








