ಬೆಂಗಳೂರು: ಗ್ರಾಮೀಣ ಪ್ರದೇಶದ ಜನರು ಇ-ಸ್ವತ್ತು ಪಡೆಯಲು ಪಂಚಾಯಿತಿ ಕಚೇರಿಗಳಿಗೆ ಪದೇಪದೇ ಅಲೆದಾಡುವ ಪರಿಸ್ಥಿತಿಗೆ ತೆರೆ ಎಳೆಯಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಇ-ಸ್ವತ್ತು ಪ್ರಕ್ರಿಯೆಯಲ್ಲಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಪಂಚಸದಸ್ಯರ ಸಮಿತಿ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ತಂತ್ರಾಂಶ ಹಾಗೂ ಸರ್ವರ್ ಸಮಸ್ಯೆಯಿಂದ ಸಾವಿರಾರು ಇ-ಸ್ವತ್ತು ಅರ್ಜಿಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸೂಚಿಸಿದ್ದಾರೆ. ಈ ಸಮಿತಿಯಲ್ಲಿ ಬೆಂಗಳೂರು, ಮಂಗಳೂರು, ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸದಸ್ಯರಾಗಿರಲಿದ್ದು, 10 ದಿನಗಳೊಳಗೆ ನಿಯಮಗಳಲ್ಲಿ ಅಗತ್ಯ ಬದಲಾವಣೆಗಳ ಕುರಿತು ವರದಿ ಸಲ್ಲಿಸಬೇಕಿದೆ.
ದಾಖಲೆ ಇಲ್ಲದ ಗ್ರಾಮಠಾಣಾ ಆಸ್ತಿಗೂ ಇ-ಸ್ವತ್ತು ಸಾಧ್ಯತೆ
ರಾಜ್ಯದ ಗ್ರಾಮಠಾಣಾ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಅನೇಕ ಕುಟುಂಬಗಳ ಬಳಿ ತಮ್ಮ ಆಸ್ತಿಯ ದಾಖಲೆಗಳಿಲ್ಲದ ಕಾರಣ ಇ-ಸ್ವತ್ತು ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಬ್ಯಾಂಕ್ ಸಾಲ, ಮನೆ ದುರಸ್ತಿ, ಪುನರ್ ನಿರ್ಮಾಣ, ಕಟ್ಟಡ ನಕ್ಷೆ ಅನುಮೋದನೆ ಹಾಗೂ ಆಸ್ತಿ ಮಾರಾಟ ಸೇರಿದಂತೆ ಹಲವು ಅಗತ್ಯ ಸೇವೆಗಳು ದೊರೆಯುತ್ತಿಲ್ಲ. ಈ ಸಮಸ್ಯೆ ನಿವಾರಣೆಗೆ ಮನೆ ಮನೆ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ರೂಪಿಸುವಂತೆ ಸಚಿವರು ಸೂಚಿಸಿದ್ದಾರೆ.
ಬಿ-ಖಾತೆ ನೀಡಿಕೆಗೂ ಪರಿಶೀಲನೆ
ಗ್ರಾಮಠಾಣಾ ವ್ಯಾಪ್ತಿಯ ಹೊರಗಿನ ಭೂಪರಿವರ್ತಿತ ಹಾಗೂ ಭೂಪರಿವರ್ತನೆ ಆಗದ ಕಂದಾಯ ಭೂಮಿಗಳಲ್ಲಿಯೂ ಅನೇಕ ಬಡಾವಣೆಗಳು ಹಾಗೂ ಕಟ್ಟಡಗಳು ನಿರ್ಮಾಣವಾಗಿವೆ. ಕೆಲವೆಡೆ ಬಿ-ಖರಾಬು ಹಾಗೂ ಗೋಮಾಳದಂತಹ ಸರ್ಕಾರಿ ಭೂಮಿಯನ್ನೂ ಸೇರಿಸಿಕೊಂಡು ಬಡಾವಣೆಗಳು ನಿರ್ಮಾಣವಾಗಿರುವ ಕಾರಣ ನಮೂನೆ 11ಬಿ ನೀಡುವಲ್ಲಿ ತೊಂದರೆ ಎದುರಾಗಿದೆ.
ಗ್ರಾಮ ಪಂಚಾಯಿತಿಗಳು ರಸ್ತೆ, ಕುಡಿಯುವ ನೀರು, ಚರಂಡಿ ಹಾಗೂ ಬೀದಿ ದೀಪ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುತ್ತಿದ್ದರೂ, ತೆರಿಗೆ ಸಂಗ್ರಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಗ್ರಾಮೀಣ ಪ್ರದೇಶದ ಎಲ್ಲ ಅರ್ಹ ಆಸ್ತಿಗಳಿಗೆ ಸುಗಮವಾಗಿ ಇ-ಸ್ವತ್ತು ನೀಡುವ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.



