ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಖಜಾನೆಯನ್ನು ದೋಚುವ ಮೂಲಕ ತನ್ನ ಪಕ್ಷದ ಹೈಕಮಾಂಡ್ ಅನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆರೋಪ ಮಾಡಿದರು.
ಗದಗದಲ್ಲಿ ಆಯುಷ್ ಇಲಾಖೆಯ ಔಷಧಿ ಖರೀದಿಯಲ್ಲಿ ನಡೆದಿರುವ ಭಾರೀ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಭ್ರಷ್ಟಾಚಾರದ ಮೂಲಕ ಕಾಂಗ್ರೆಸ್ ಹೈಕಮಾಂಡ್ಗೆ ಹಣ ಹರಿಸಲಾಗುತ್ತಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯವು ಹೈಕಮಾಂಡ್ನ ಎಟಿಎಂ ಆಗುತ್ತದೆ ಎಂದು ನಾನು ಹಿಂದೆಯೇ ಹೇಳಿದ್ದೆನೆಂದು ಅವರು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿ ಹಣ ದುರುಪಯೋಗವಾಗಿದೆ. ಹೈಕಮಾಂಡ್ ತೃಪ್ತಿಗಾಗಿ ಗುತ್ತಿಗೆದಾರರಿಂದ ಕಮಿಷನ್ ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಗುತ್ತಿಗೆದಾರರ ಸಂಘವೇ ಪತ್ರ ಬರೆದಿರುವುದು ಸರ್ಕಾರದ ಭ್ರಷ್ಟಾಚಾರದ ಸ್ಪಷ್ಟ ಸಾಕ್ಷಿಯಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.ಇದನ್ನು ಓದಿ –15 ವರ್ಷ ಮೀರಿದ ವಾಹನಗಳು ಗುಜರಿಗೆ
ರಾಜ್ಯದಲ್ಲಿ ಭ್ರಷ್ಟಾಚಾರವನ್ನೇ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ದುಡ್ಡು ದೋಚುವವರು ಬಡವರಾಗಿರಲಿ ಅಥವಾ ಶ್ರೀಮಂತರಾಗಿರಲಿ, ಎಲ್ಲರೂ ಒಂದೇ ರೀತಿಯಲ್ಲಿ ರಾಜ್ಯದ ಖಜಾನೆಯನ್ನು ಖಾಲಿ ಮಾಡುತ್ತಿದ್ದಾರೆ. ಹೈಕಮಾಂಡ್ ತೃಪ್ತಿಗಾಗಿ ರಾಜ್ಯವನ್ನು ಲೂಟಿ ಮಾಡುವ ಕಾರ್ಯವೇ ಈಗ ನಡೆಯುತ್ತಿದೆ ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.








