ಬೆಂಗಳೂರು: ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ, ಕರ್ನಾಟಕದಲ್ಲಿಯೂ ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ.
ರಾಜ್ಯದಲ್ಲಿ ಇದುವರೆಗೆ 32 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದೆ.
ಕೆಲ ವರ್ಷಗಳ ಹಿಂದೆ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್ ವೈರಸ್ ಮತ್ತೆ ಹರಡುವ ಸಾಧ್ಯತೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದಲ್ಲಿ ಹೊಸ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಆದರೆ ಸದ್ಯ ಆತಂಕಪಡುವಂತಹ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಜುಲೈನಲ್ಲಿ ಪ್ರಕರಣಗಳ ಏರಿಕೆ
ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ಕೇವಲ 14 ಕೋವಿಡ್ ಪ್ರಕರಣಗಳು ದಾಖಲಾಗಿದ್ದರೆ, ಜುಲೈ ತಿಂಗಳ ಮೊದಲ ಹತ್ತು ದಿನಗಳಲ್ಲೇ ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಒಟ್ಟು 193 ಶಂಕಿತ ವ್ಯಕ್ತಿಗಳ ಮಾದರಿಗಳನ್ನು ಪರೀಕ್ಷಿಸಿದಾಗ ಈ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಆತಂಕ ಬೇಡ ಎಂದ ಆರೋಗ್ಯ ಇಲಾಖೆ
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಆಯುಕ್ತ ಗುರುದತ್ ಹೆಗಡೆ, ಆಂಧ್ರಪ್ರದೇಶದ ಕಡಪಾದಲ್ಲಿ ವರದಿಯಾಗಿರುವ ಸಾವುಗಳು ಇನ್ನೂ ಶಂಕಿತ ಪ್ರಕರಣಗಳಾಗಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರದೊಂದಿಗೆ ಮಾಹಿತಿ ವಿನಿಮಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಪತ್ತೆಯಾಗಿರುವ ಬಹುತೇಕ ಸೋಂಕಿತರಿಗೆ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ಶಸ್ತ್ರಚಿಕಿತ್ಸೆಗೆ ಮುನ್ನ ನಡೆಸುವ ಕಡ್ಡಾಯ ತಪಾಸಣೆ ವೇಳೆ ಸೋಂಕು ಪತ್ತೆಯಾಗುತ್ತಿರುವುದು ಹೆಚ್ಚಾಗಿದೆ ಎಂದು ಅವರು ಹೇಳಿದರು.ಇದನ್ನು ಓದಿ –ಶಿಕ್ಷಕರ ಕಿರುಕುಳ ಆರೋಪ: 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ರಾಜ್ಯದ ಕೋವಿಡ್ ಪರಿಸ್ಥಿತಿಯನ್ನು ಆರೋಗ್ಯ ಇಲಾಖೆ ಪ್ರತಿದಿನವೂ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಸಾರ್ವಜನಿಕರು ಅನಗತ್ಯ ವದಂತಿಗಳಿಗೆ ಕಿವಿಗೊಡದೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಸದ್ಯ ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ಭರವಸೆ ನೀಡಿದೆ.








