ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರ ಗಮನ ಸೆಳೆಯುವ ಸೂಚನೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸಿನಂತೆ ಶಿವಮೊಗ್ಗ ಮತ್ತು ಕೊಡಗು ಸೇರಿ ರಾಜ್ಯದ ಎಲ್ಲಾ ಕ್ಷೇತ್ರಗಳ ಸೀಮಾ ಗಡಿಗಳನ್ನು ಗುರುತಿಸಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಲು ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಲ್ಲಿ ತಿದ್ದುಪಡಿ ತರಲಾಗಿದೆ ಎಂದು ಹೇಳಿದರು.
ಕ್ಷೇತ್ರಗಳ ಗಡಿ ಗುರುತಿಸುವ ಅಧಿಸೂಚನೆ ಹೊರಬಿದ್ದಿದ್ದು, ಮೀಸಲು ನಿಗದಿ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ಚುನಾವಣೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ವಿಧಾನಸಭೆಯಲ್ಲಿ 9 ವಿಧೇಯಕಗಳ ಮಂಡನೆ
ವಿಧಾನಸಭಾ ಅಧಿವೇಶನದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ. ಪಾಟೀಲ್ ಅವರು 2025ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ, ಸಹಕಾರ ಸಂಘಗಳ, ಸೌಹಾರ್ದ ಸಹಕಾರಿ, ಪಟ್ಟಣ ಮತ್ತು ಗ್ರಾಮಾಂತರ ಯೋಜನೆ, ನಗರ ಪಾಲಿಕೆ, ಗದಗ-ಬೆಟಗೇರಿ ವ್ಯಾಪಾರ-ಸಂಸ್ಕೃತಿ-ವಸ್ತುಪ್ರದರ್ಶನ ಪ್ರಾಧಿಕಾರ, ಮುನಿಸಿಪಾಲಿಟಿಗಳ, ದೇವದಾಸಿ ನಿಷೇಧ ಹಾಗೂ ಪುನರ್ವಸತಿ ಕಾನೂನುಗಳ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಿದರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು 2025ನೇ ಸಾಲಿನ ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆ ನಿಯಂತ್ರಣ ತಿದ್ದುಪಡಿ ವಿಧೇಯಕ ಮಂಡಿಸಿದರು. ಎಲ್ಲಾ ಪ್ರಸ್ತಾವನೆಗಳು ನಂತರ ಸಭೆಯಲ್ಲಿ ಅಂಗೀಕರಿಸಲ್ಪಟ್ಟವು.
ಅನಧಿಕೃತ ತ್ಯಾಜ್ಯ ಸುರಿವಿಕೆ ವಿರುದ್ಧ ಕ್ರಮ
ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಸೂಚನೆಗೆ ಪ್ರತಿಕ್ರಿಯಿಸಿದ ಪೌರಾಡಳಿತ ಸಚಿವ ರಹೀಂ ಖಾನ್, ಅನಧಿಕೃತವಾಗಿ ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೋಲಾರದ ಕೆಂದಟ್ಟಿ ಗ್ರಾಮದಲ್ಲಿ ಹತ್ತು ಎಕರೆ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲಾಗಿದೆ. ಪ್ರತಿದಿನ 35 ಟನ್ ಹಸಿ ತ್ಯಾಜ್ಯವನ್ನು ಸಂಸ್ಕರಿಸಿ “ಕೋಲಾರ ಅಗ್ರಿಗೋಲ್ಡ್” ಬ್ರಾಂಡ್ ಹೆಸರಿನಲ್ಲಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಜೊತೆಗೆ ಮಣಿಘಟ್ಟ ರಸ್ತೆ ಹಾಗೂ ಕೆಂದಟ್ಟಿ ಘಟಕದಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಿ ಮರುಬಳಕೆದಾರರಿಗೆ ಮಾರಾಟ ಮಾಡುವ ಮೂಲಕ ಆದಾಯವನ್ನು ನಗರಸಭೆಗೆ ಪಾವತಿಸಲಾಗುತ್ತಿದೆ.ಇದನ್ನು ಓದಿ –ಅರ್ಜುನ್ ತೆಂಡೂಲ್ಕರ್–ಸಾನಿಯಾ ಚಂದೋಕ್ ನಿಶ್ಚಿತಾರ್ಥ
ಸಚಿವರು, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಿರಂತರ ಅಭಿಯಾನ ನಡೆಯುತ್ತಿದ್ದು, ತ್ಯಾಜ್ಯ ಸುರಿವಿಕೆ ಹೆಚ್ಚಾಗಿರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಹಾಗೂ ದಂಡ ವಿಧಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದರು.