ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ ಕೋಚಿಂಗ್ ಕೇಂದ್ರದ ಕಟ್ಟಡದಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಟ್ಟಡದಾದ್ಯಂತ ವ್ಯಾಪಿಸಿದೆ. ಈ ವೇಳೆ ಕಟ್ಟಡದೊಳಗೆ ವಿದ್ಯಾರ್ಥಿಗಳು ಸೇರಿದಂತೆ ಹಲವರು ಸಿಲುಕಿಕೊಂಡಿದ್ದರು. ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ಕೆಲವು ವಿದ್ಯಾರ್ಥಿಗಳು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದ ಘಟನೆ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳಲ್ಲಿ, ಬೆಂಕಿಯಿಂದ ಆವರಿಸಲ್ಪಟ್ಟ ಕಟ್ಟಡದಿಂದ ಯುವಕನೊಬ್ಬ ಕೆಳಕ್ಕೆ ಜಿಗಿಯುವ ದೃಶ್ಯ ಕಾಣಿಸಿಕೊಂಡಿದೆ. ಕೆಳಗೆ ಬಿದ್ದ ಪರಿಣಾಮ ಆತ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೂರು ಅಂತಸ್ತಿನ ಈ ಕಟ್ಟಡದ ಮೇಲಿನ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ವೇಗವಾಗಿ ಇಡೀ ಕಟ್ಟಡಕ್ಕೆ ಹರಡಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಒಳಗೆ ಸಿಲುಕಿಕೊಂಡಿದ್ದವರನ್ನು ಹೊರತೆಗೆದಲು ಅಗ್ನಿಶಾಮಕ ಸಿಬ್ಬಂದಿ ಕೆಲವು ಕಿಟಕಿಗಳನ್ನು ಒಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಗ್ನಿ ಅವಘಡದಿಂದ ಪಾರಾಗಲು ಐದರಿಂದ ಏಳು ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿದಿದ್ದು, ಅವರಲ್ಲಿ ಒಬ್ಬರ ಕಾಲು ಹಾಗೂ ಇತರೆ ಮೂಳೆಗಳಿಗೆ ಗಂಭೀರ ಗಾಯಗಳಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಕಿ ಅವಘಡದ ನಿಖರ ಕಾರಣ ಹಾಗೂ ಸಾವಿನ ಸಂಖ್ಯೆ ಕುರಿತು ತನಿಖೆ ಮುಂದುವರಿದಿದೆ.








