ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಈ ಆದೇಶ ನೀಡಿದ್ದು, ಜೂನ್ 30ರ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಮತ್ತೆ ಯಾವುದೇ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಸರ್ಕಾರಿ ಸಿಬ್ಬಂದಿ ನಿರತರಾಗಿರುವುದರಿಂದ ಚುನಾವಣೆ ನಡೆಸಲು ಹೆಚ್ಚಿನ ಸಮಯ ಬೇಕಾಗಿದೆ ಎಂದು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗ ಮನವಿ ಮಾಡಿದ್ದವು.
ಚುನಾವಣೆ ವಿಳಂಬಕ್ಕೆ ವಿರೋಧ ವ್ಯಕ್ತಪಡಿಸಿದ ಹಿರಿಯ ವಕೀಲ ಕೆ. ಪರಮೇಶ್ವರ, ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ಸರ್ಕಾರ ಈ ಹಿಂದೆ ಭರವಸೆ ನೀಡಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಬಿಬಿಎಂಪಿ ಸದಸ್ಯರ ಅವಧಿ 2020ರ ಸೆಪ್ಟೆಂಬರ್‌ನಲ್ಲಿ ಅಂತ್ಯಗೊಂಡ ಬಳಿಕ ಆಡಳಿತಾಧಿಕಾರಿಗಳ ಮೂಲಕ ಆಡಳಿತ ನಡೆಯುತ್ತಿದ್ದು, ವಾರ್ಡ್ ಮರುವಿಂಗಡಣೆ ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆಯುತ್ತಿವೆ.ಇದನ್ನು ಓದಿ –₹35 ಕೋಟಿ ಮೌಲ್ಯದ ಡ್ರಗ್ಸ್ ವಶ : 8 ಮಂದಿ ಬಂಧನ
ಈಗ ಜಿಬಿಎ ಅಡಿಯಲ್ಲಿ ಐದು ನಗರ ಪಾಲಿಕೆಗಳಿಗೆ ಒಟ್ಟು 369 ವಾರ್ಡ್‌ಗಳನ್ನು ಅಂತಿಮಗೊಳಿಸಿ ಮತದಾರರ ಪಟ್ಟಿಯೂ ಪ್ರಕಟಿಸಲಾಗಿದೆ.








