ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಚುನಾವಣೆ ನಡೆಸುವ ಕುರಿತು ದಿನಾಂಕ ನಿಶ್ಚಿತವಾಗಿದೆ. ಜಿಬಿಎ ವ್ಯಾಪ್ತಿಯಲ್ಲಿರುವ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ.
ಜಿಬಿಎ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.
ಈ ವೇಳೆ ಸರ್ಕಾರದ ವಕೀಲರು, ಮೀಸಲಾತಿ ಸಂಬಂಧಿಸಿದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿದ್ದು, ಫೆಬ್ರವರಿ 28ರವರೆಗೆ ಮೀಸಲಾತಿ ಪ್ರಕ್ರಿಯೆ ಮುಂದುವರೆಯಲಿದೆ ಎಂದು ಕೋರ್ಟ್‌ಗೆ ತಿಳಿಸಿದರು. ಈ ಪ್ರಕ್ರಿಯೆ ಮುಗಿದ ಬಳಿಕ ಚುನಾವಣಾ ಆಯೋಗಕ್ಕೆ ವಿಚಾರವನ್ನು ಬಿಡಲಾಗುತ್ತದೆ ಎಂದರು.
ಚುನಾವಣಾ ಆಯೋಗದ ಪರ ವಕೀಲರು, ಮಾರ್ಚ್ 16ರ ವೇಳೆಗೆ ಮತದಾರರ ಪಟ್ಟಿಯ ಪರಿಶೀಲನೆ ಪೂರ್ಣಗೊಳ್ಳಲಿದೆ. ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿರುವುದರಿಂದ, ಮೇ ತಿಂಗಳ ಕೊನೆಯ ವಾರದವರೆಗೆ ಸಮಯ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಗಿಸಲು ಎಷ್ಟು ಸಮಯ ಬೇಕು ಎಂದು ಪ್ರಶ್ನಿಸಿತು. ಆಯೋಗದ ಪರವಾಗಿ ಉತ್ತರಿಸಿದ ವಕೀಲರು, ಜೂನ್‌ವರೆಗೂ ಸಮಯ ಬೇಕಾಗಬಹುದು ಎಂದು ತಿಳಿಸಿದರು.
ಅಂತಿಮವಾಗಿ, ಸುಪ್ರೀಂ ಕೋರ್ಟ್ ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲೇಬೇಕು ಎಂದು ಆದೇಶ ನೀಡಿದ್ದು, ರಾಜ್ಯ ಸರ್ಕಾರ ಮತ್ತೊಮ್ಮೆ ಸಮಯ ವಿಸ್ತರಣೆ ಕೇಳದಂತೆ ಕಠಿಣ ಎಚ್ಚರಿಕೆಯನ್ನು ನೀಡಿದೆ.








