ಬೆಂಗಳೂರು: ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿರುವುದರಿಂದ ಸಾರ್ವಜನಿಕರು ಮರಗಳು ಹಾಗೂ ಹಳೆಯ ಕಟ್ಟಡಗಳ ಸಮೀಪ ಆಶ್ರಯ ಪಡೆಯದಂತೆ ಇಲಾಖೆ ಸಲಹೆ ನೀಡಿದೆ.
ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಈ ಭಾಗಗಳಲ್ಲೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.ಇದನ್ನು ಓದಿ –ರಾಮ ಮಂದಿರ ಪ್ರಕರಣ: ವಕಾಲತ್ತು ವಹಿಸದಿರಲು ನಿರ್ಧಾರ
ಜೂನ್ ಅಂತ್ಯ ಹಾಗೂ ಜುಲೈ ಆರಂಭದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








