ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ನಿರೀಕ್ಷೆಯಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳೊಂದಿಗೆ ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ಜುಲೈ 11ರಿಂದ ರಾಜ್ಯದಲ್ಲಿ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ನಿರೀಕ್ಷೆಯಿದೆ.
ಇನ್ನು ಬೆಂಗಳೂರು ನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಲಾಗಿದೆ.








