ಬೆಂಗಳೂರು: ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಅಕ್ಟೋಬರ್ 9ರವರೆಗೆ ಭಾರೀ ಮಳೆಯ ಸಾಧ್ಯತೆಯನ್ನು ಇಲಾಖೆ ವರದಿ ತಿಳಿಸಿದೆ.
ಪಶ್ಚಿಮ-ಮಧ್ಯ ಹಾಗೂ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದೇ ಈ ಮಳೆಯ ಪ್ರಮುಖ ಕಾರಣವಾಗಿದೆ. ಈ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ನಿರಂತರ ಮಳೆಯ ಜೊತೆಗೆ ಚಳಿ ವಾತಾವರಣವೂ ಇರಲಿದೆ.
ಮಳೆ ಬೀಳುವ ಜಿಲ್ಲೆಗಳು
ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು.
ಮಲೆನಾಡು: ಹಾಸನ, ಕೊಡಗು, ಶಿವಮೊಗ್ಗ.
ಕರಾವಳಿ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ.
ಉತ್ತರ ಒಳನಾಡು: ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ.
ಅಕ್ಟೋಬರ್ 4ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವಾರಾಂತ್ಯದಲ್ಲಿ ಕರಾವಳಿ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚುವ ನಿರೀಕ್ಷೆ ಇದೆ.
ಬೆಂಗಳೂರಿನ ವಾತಾವರಣ
ಬೆಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅನೇಕ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.








