- ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದಿದ್ದರೂ, ಜೂನ್ 28ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷವಾಗಿ ಕರಾವಳಿ ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 23ರಿಂದ 28ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಕೆಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯ ನಿರೀಕ್ಷೆ ವ್ಯಕ್ತವಾಗಿದೆ.
ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ಇದೇ ವೇಳೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದರೂ, ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿ ಗಾಳಿ ಹಾಗೂ ಹೆಚ್ಚಿದ ತೇವಾಂಶದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇದನ್ನು ಓದಿ –ಕೋಚಿಂಗ್ ಕೇಂದ್ರದಲ್ಲಿ ಅಗ್ನಿ ಅವಘಡ: 11 ಮಂದಿ ಸಜೀವ ದಹನ
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರೈತರು, ಮೀನುಗಾರರು ಹಾಗೂ ಸಾರ್ವಜನಿಕರು ಇಲಾಖೆ ನೀಡುವ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.








