ಚಿಕ್ಕಮಗಳೂರು: ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದರು.
ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ದೆಹಲಿ ಭೇಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸಚಿವ ಸ್ಥಾನ ಆಕಾಂಕ್ಷಿಗಳು ತಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಮುಂದಿಡಲು ಭೇಟಿ ನೀಡುವುದು ಸಹಜ ಎಂದರು. ಸಂಪುಟ ಪುನಾರಚನೆ ಕುರಿತ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಇನ್ನೂ ಸಂಪುಟ ಪುನಾರಚನೆ ಪ್ರಕ್ರಿಯೆ ಬಾಕಿಯಿದ್ದು, ಐದು ರಾಜ್ಯಗಳ ಚುನಾವಣೆ ಹಾಗೂ ಬಜೆಟ್ ಅಧಿವೇಶನದ ಹಿನ್ನೆಲೆ ಇದರಲ್ಲಿ ವಿಳಂಬವಾಗಿರಬಹುದು ಎಂದು ಹೇಳಿದರು.
ಉಪಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸೋಲು-ಗೆಲುವು ಆಧಾರವಾಗಿ ಯಾರನ್ನೂ ಹೊಣೆಗಾರರನ್ನಾಗಿಸುವುದಿಲ್ಲ ಎಂದು ಹೇಳಿದರು.
ಸಲೀಂ ಅಹಮದ್ ಅವರು ಪಕ್ಷದ ಹಿರಿಯ ಮುಖಂಡರಾಗಿದ್ದು, ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕೆಲವರ ಪಕ್ಷವಿರೋಧಿ ಚಟುವಟಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಕಾಂಗ್ರೆಸ್ ಸೋಲಿನ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.ಇದನ್ನು ಓದಿ –ರಾಜ್ಯಾದ್ಯಂತ ತಾಪಮಾನ ಏರಿಕೆ ಎಚ್ಚರಿಕೆ
ಪಕ್ಷದ ಒಳಗಿರುವ ಕೆಲವು ಅಸಮಾಧಾನಗಳ ನಡುವೆಯೂ ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.








