ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ಮೂವರಿಂದ ನಾಲ್ವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಬೆಳಗಿನ ಜಾವ ಸುಮಾರು 3.48ರ ವೇಳೆಗೆ ಗುಡ್ಡದ ಇಳಿಜಾರಿನ ಒಂದು ಭಾಗ ಕುಸಿದು, ಅದರ ಅವಶೇಷಗಳು ಎರಡು-ಮೂರು ಮನೆಗಳ ಮೇಲೆ ಬಿದ್ದಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಇನ್ನೂ ಮೂವರಿಂದ ನಾಲ್ವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಡಿಸಿಪಿ ಗಣೇಶ್ ಶಿಂಧೆ ತಿಳಿಸಿದ್ದಾರೆ.
ಇನ್ನು ಘಟನೆಯಲ್ಲಿ ಗಾಯಗೊಂಡಿರುವ 18 ವರ್ಷದ ಸೋಹೆಲ್ ಅನ್ಸಾರಿ ಹಾಗೂ 14 ವರ್ಷದ ಮೊಹಮ್ಮದ್ ಅನ್ಸಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಹೆಲ್‌ಗೆ ತಲೆಗೆ ಗಾಯವಾಗಿದ್ದು, ಮೊಹಮ್ಮದ್‌ಗೆ ಬೆನ್ನಿಗೆ ಗಾಯವಾಗಿದೆ. ಇಬ್ಬರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಅವಶೇಷಗಳ ತೆರವು ಹಾಗೂ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸ್ಥಳದಲ್ಲಿ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.








